ಸಮರ್ಪಕ ಬಸ್ ಸೇವೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಗದಗ, 16 ಜುಲೈ (ಹಿ.ಸ.) ಆ್ಯಂಕರ್:- ಶಾಲಾ–ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಬಸ್ನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿಂದು ನಡೆದಿದೆ. ಹಲವು ತ
ಫೋಟೋ


ಗದಗ, 16 ಜುಲೈ (ಹಿ.ಸ.)

ಆ್ಯಂಕರ್:- ಶಾಲಾ–ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಬಸ್ನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿಂದು ನಡೆದಿದೆ.

ಹಲವು ತಿಂಗಳುಗಳಿಂದ ಬಸ್ ಸಮಸ್ಯೆ ಎದುರಿಸುತ್ತಿದ್ದ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಬಸ್ ತಡೆದು ಪ್ರತಿಭಟನೆಗೆ ಮುಂದಾದರು.

ಲಕ್ಕಲಕಟ್ಟಿ ಗ್ರಾಮದಿಂದ ಪ್ರತಿದಿನ ಸುಮಾರು 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಜೇಂದ್ರಗಡ ಪಟ್ಟಣದ ವಿವಿಧ ಶಾಲೆಗಳು ಹಾಗೂ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಆದರೆ ವಿದ್ಯಾರ್ಥಿಗಳ ಅಗತ್ಯಕ್ಕೆ ತಕ್ಕಂತೆ ಬಸ್ ಸೇವೆ ಇಲ್ಲದ ಕಾರಣ ಪ್ರತಿನಿತ್ಯ ಶಿಕ್ಷಣಕ್ಕೆ ಹಾಜರಾಗುವುದೇ ದೊಡ್ಡ ಸವಾಲಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.

ವಿದ್ಯಾರ್ಥಿ ರೇಖಾ ಮಾತನಾಡಿ ಬೆಳಿಗ್ಗೆ 8.30 ಗಂಟೆಗೆ ಬಸ್ ಬಿಡುವಂತೆ ಹಲವು ಬಾರಿ ಸಾರಿಗೆ ಇಲಾಖೆಗೆ ಮನವಿ ಮಾಡಲಾಗಿದೆ. ಆ ಸಮಯದಲ್ಲಿ ಬಸ್ ಇದ್ದರೆ ಶಾಲೆ ಹಾಗೂ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತಲುಪಬಹುದು. ಆದರೆ ಇಲಾಖೆಯು ಆ ಮನವಿಯನ್ನು ಪರಿಗಣಿಸದೆ ಬೆಳಿಗ್ಗೆ 9.15 ಗಂಟೆ ಸುಮಾರಿಗೆ ಮಾತ್ರ ಬಸ್ ಸಂಚರಿಸುತ್ತಿದೆ. ಅಷ್ಟರಲ್ಲಿ ಶಾಲೆ ಮತ್ತು ಕಾಲೇಜುಗಳ ತರಗತಿಗಳು ಆರಂಭವಾಗುವ ಸಮಯವಾಗಿರುವುದರಿಂದ ವಿದ್ಯಾರ್ಥಿಗಳು ಪ್ರತಿದಿನ ತಡವಾಗಿ ತಲುಪಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರ ಜೊತೆಗೆ 9.15ಕ್ಕೆ ಬರುವ ಬಸ್ ಈಗಾಗಲೇ ಪ್ರಯಾಣಿಕರಿಂದ ತುಂಬಿರುತ್ತದೆ. ಆಸನಗಳ ಮಾತು ಬಿಡಿ, ನಿಲ್ಲಲು ಕೂಡ ಜಾಗ ಇಲ್ಲದಷ್ಟು ಜನಸಂದಣಿ ಇರುವುದರಿಂದ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಪ್ರಯಾಣ ಮಾಡಬೇಕಾಗುತ್ತಿದೆ. ಕೆಲ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಏರಲು ಸಾಧ್ಯವಾಗದೇ ಹಿಂದೆಯೇ ಉಳಿಯಬೇಕಾಗುತ್ತದೆ. ಇದರಿಂದ ತರಗತಿಗಳು ತಪ್ಪುವುದು, ಪರೀಕ್ಷೆಗಳಿಗೆ ತಡವಾಗುವುದು ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಈ ಸಮಸ್ಯೆ ಬಗ್ಗೆ ಹಲವು ಬಾರಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರಿಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ವಿದ್ಯಾರ್ಥಿಗಳ ಶಿಕ್ಷಣದ ಪ್ರಶ್ನೆಯಾಗಿದ್ದರೂ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಗ್ರಾಮಕ್ಕೆ ಬಂದ ಸಾರಿಗೆ ಸಂಸ್ಥೆಯ ಬಸ್ನ್ನು ತಡೆದು ಪ್ರತಿಭಟನೆ ನಡೆಸಿದರು. ಸಾರಿಗೆ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿ, ತಕ್ಷಣ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಬೇಕು ಹಾಗೂ ಬೆಳಿಗ್ಗೆ 8.30ಕ್ಕೆ ನಿಯಮಿತವಾಗಿ ಬಸ್ ಸಂಚರಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಸಂಬಂಧಪಟ್ಟ ಡಿಪೋ ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಬೇಕು ಎಂದು ಪಟ್ಟು ಹಿಡಿದರು.

ಪ್ರತಿಭಟನೆಯಿಂದ ಕೆಲಕಾಲ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸ್ಥಳೀಯರು ಹಾಗೂ ಪ್ರಯಾಣಿಕರು ವಿದ್ಯಾರ್ಥಿಗಳ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಸಾರಿಗೆ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಲಕ್ಕಲಕಟ್ಟಿ ಗ್ರಾಮದಿಂದ ಗಜೇಂದ್ರಗಡಕ್ಕೆ ತೆರಳುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಆದರೂ ಅದಕ್ಕೆ ಅನುಗುಣವಾಗಿ ಬಸ್ ಸೇವೆಯನ್ನು ಹೆಚ್ಚಿಸದಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿ ಬಸ್ಗಳನ್ನು ನಿಯೋಜಿಸಿ, ಶಾಲೆ–ಕಾಲೇಜುಗಳ ವೇಳಾಪಟ್ಟಿಗೆ ಅನುಗುಣವಾಗಿ ಸಮಯ ನಿಗದಿಪಡಿಸುವುದು ಅಗತ್ಯವಾಗಿದೆ ಎಂದು ಪೋಷಕರು ಆಗ್ರಹಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡುವ ನಿರೀಕ್ಷೆ ವ್ಯಕ್ತವಾಗಿದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತ್ವರಿತವಾಗಿ ಸ್ಪಂದಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande