
ಗದಗ, 16 ಜುಲೈ (ಹಿ.ಸ.)
ಆ್ಯಂಕರ್:- ಬಿಡದಿ ಟೌನ್ಶಿಪ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರೈತರ ಫಲವತ್ತಾದ ಜಮೀನುಗಳನ್ನು ಸರ್ಕಾರ ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.
ಗದಗ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಸರ್ಕಾರ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದರೂ, ವಾಸ್ತವದಲ್ಲಿ ರೈತರಿಗೆ ರಾತ್ರಿ ವೇಳೆ ಮನೆ ಬಾಗಿಲಿಗೆ ಬಂದು ಬೆದರಿಕೆ ಹಾಕಲಾಗುತ್ತಿದೆ ಎಂದು ರೈತರು ತಮಗೆ ಮಾಹಿತಿ ನೀಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಒಂದೆಡೆ ಸರ್ಕಾರ ಭರವಸೆ ನೀಡುತ್ತಿದ್ದರೆ, ಮತ್ತೊಂದೆಡೆ ಅಧಿಕಾರಿಗಳು ಹಾಗೂ ಕೆಲವರು ರೈತರ ಮೇಲೆ ಒತ್ತಡ ಹೇರುತ್ತಿರುವುದು ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಪಟ ನಾಟಕ ಆಡುತ್ತಿದ್ದಾರೆ ಎಂದು ಟೀಕಿಸಿದ ವಿಜಯೇಂದ್ರ, ಮುಖ್ಯಮಂತ್ರಿಯಾದ ನಂತರವೂ ರಿಯಲ್ ಎಸ್ಟೇಟ್ ಮನೋಭಾವದಿಂದ ಹೊರಬಂದಿಲ್ಲ ಎಂದು ವಾಗ್ದಾಳಿ ನಡೆಸಿದರು. ಸರ್ಕಾರದ ಪ್ರಮುಖ ಉದ್ದೇಶ ರೈತರ ಹಿತ ಕಾಪಾಡುವುದು ಆಗಿರಬೇಕು. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರ ಬದುಕನ್ನೇ ಸಂಕಷ್ಟಕ್ಕೆ ತಳ್ಳುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಹಾಗೂ ಅವರ ಕುಟುಂಬದವರು ಸಾವಿರಾರು ಎಕರೆ ಜಮೀನು ಹೊಂದಿದ್ದಾರೆ ಎಂಬ ಆರೋಪ ಮಾಡಿರುವ ವಿಜಯೇಂದ್ರ, ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿದ್ದರೆ ಮೊದಲು ತಮ್ಮ ಜಮೀನನ್ನು ಬಳಸಲಿ ಎಂದು ರೈತರು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.
ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಸರ್ಕಾರ ಮಾಡಬಾರದು. ಯಾವುದೇ ವ್ಯಕ್ತಿಯ ಹೆಸರಿನಲ್ಲಿ ಅಥವಾ ರಾಜಕೀಯ ಉದ್ದೇಶಕ್ಕಾಗಿ ರೈತರ ಜೀವನದೊಂದಿಗೆ ಆಟವಾಡಬಾರದು ಎಂದು ಎಚ್ಚರಿಕೆ ನೀಡಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಈ ವಿಚಾರದಲ್ಲಿ ಅನಗತ್ಯವಾಗಿ ಎಳೆದು ತರುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಹಾಕಲು ರಾಜಕೀಯ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿದ ಬಳಿಕ ಇದೀಗ ಅದೇ ಭಾಗದಲ್ಲಿ ರೈತರ ಜಮೀನು ಕಸಿದುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಭಾರತ ಜೋಡೋ ಯಾತ್ರೆ ನಡೆಸಿ ರೈತರ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ಈಗ ಬಿಡದಿ ಟೌನ್ಶಿಪ್ ವಿಚಾರದಲ್ಲಿ ಮೌನ ವಹಿಸಿರುವುದು ಸರಿಯಲ್ಲ ಎಂದರು. ರೈತರ ಪರ ನಿಲ್ಲಬೇಕಾದ ನೈತಿಕ ಹೊಣೆಗಾರಿಕೆ ಕಾಂಗ್ರೆಸ್ ನಾಯಕತ್ವದ ಮೇಲಿದೆ. ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಸಾರ್ವಜನಿಕವಾಗಿ ಖಂಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿಳಿಸಿದ ವಿಜಯೇಂದ್ರ, ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದರು. ರೈತರ ಹಿತಾಸಕ್ತಿಯ ರಕ್ಷಣೆಗೆ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ಭಾಗದಲ್ಲಿ ಸ್ಥಾಪಿಸಲು ಸರ್ಕಾರ ಮುಂದಾಗಿರುವುದಕ್ಕೂ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗುವಂತೆ ತುಮಕೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಬಹುದಿತ್ತು. ಆದರೆ ರಿಯಲ್ ಎಸ್ಟೇಟ್ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕನಕಪುರಕ್ಕೆ ಯೋಜನೆ ಕೊಂಡೊಯ್ಯಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿದ್ದು, ರೈತರು ಮಳೆ ಕೊರತೆಯಿಂದ ಸಂಕಷ್ಟದಲ್ಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕಿತ್ತು. ಆದರೆ ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಟೀಕಿಸಿದರು.
ಕೇವಲ ಪ್ರಧಾನಮಂತ್ರಿಗೆ ಪತ್ರ ಬರೆದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ರಾಜ್ಯದ ಕೃಷಿ ಸಚಿವರು ಹಾಗೂ ಸಂಬಂಧಿತ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ರೈತರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತರ ಬದುಕು ಮತ್ತು ಕೃಷಿ ಭೂಮಿ ಉಳಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಅಭಿವೃದ್ಧಿಯ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಸಂಕಷ್ಟಕ್ಕೆ ತಳ್ಳುವ ಯಾವುದೇ ನಿರ್ಧಾರವನ್ನು ಬಿಜೆಪಿ ವಿರೋಧಿಸಲಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ರೈತರ ಶಾಪಕ್ಕೆ ಸರ್ಕಾರ ಗುರಿಯಾಗುವ ಮುನ್ನ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP