
ಬೆಂಗಳೂರು, 17 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದು, ಶಿರಾ ನಗರಸಭೆ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಕಲಬುರಗಿ ಜಿಲ್ಲಾ ನ್ಯಾಯಾಲಯದ 5ನೇ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ್ ಲೋಖಂಡೆ ಅವರು 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ರಾಜಿ ಅರ್ಜಿ ಸಲ್ಲಿಸಲು ಹೈದರಾಬಾದ್ ಮೂಲದ ದೂರುದಾರರಿಂದ ಲಂಚ ಪಡೆದ ಆರೋಪ ಕೇಳಿಬಂದಿದೆ. ನಗದು ಜೊತೆಗೆ ಸೀರೆ, ಶರ್ಟ್, ಜೀನ್ಸ್ ಪ್ಯಾಂಟ್, ಶೂ, ಮಹಿಳೆಯರ ಉಡುಪು ಹಾಗೂ ಚಪ್ಪಲಿಗಳನ್ನೂ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಅರುಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಇದೇ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ ಅವರು 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸಪೇಟೆಯ ಗುತ್ತಿಗೆದಾರರ 48 ಲಕ್ಷ ರೂಪಾಯಿ ಕಾಮಗಾರಿ ತನಿಖೆ ನಡೆಸದಿರಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದ್ದು, ಮೊದಲ ಕಂತಿನ 5 ಲಕ್ಷ ರೂಪಾಯಿ ಸ್ವೀಕರಿಸುವ ವೇಳೆ ಬಂಧಿಸಲಾಗಿದೆ. ಬಳ್ಳಾರಿ ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಇನ್ನೊಂದೆಡೆ, ಇ-ಖಾತೆ, ಹಕ್ಕುಪತ್ರ ವರ್ಗಾವಣೆ, ಇ-ಸ್ವತ್ತು, ಯುಜಿಡಿ ಹಾಗೂ ಕಟ್ಟಡ ಪರವಾನಿಗೆ ನೀಡುವಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ತುಮಕೂರು ಜಿಲ್ಲೆಯ ಶಿರಾ ನಗರಸಭೆ ಕಚೇರಿಯ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಕಚೇರಿಯ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ತುಮಕೂರು ಲೋಕಾಯುಕ್ತ ಎಸ್‌ಪಿ ನೇತೃತ್ವದಲ್ಲಿ ಇಬ್ಬರು ಡಿವೈಎಸ್‌ಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು ಹಾಗೂ 10ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.