
ವಿಜಯಪುರ, 18 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ನಗರದ ಅಂಜುಮಾನ್ ಇಸ್ಲಾಂ ಸಂಸ್ಥೆಯ ಮಹತ್ವಾಕಾಂಕ್ಷಿ ಶಾದಿ ಮಹಲ್ ನಿರ್ಮಾಣ ಕಾಮಗಾರಿ ಅಂದಾಜು ₹50 ಲಕ್ಷ ವೆಚ್ಚದಲ್ಲಿ ಭರದಿಂದ ಸಾಗುತ್ತಿದ್ದು, ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳುವ ಹಂತ ತಲುಪಿದೆ ಎಂದು ಶಾಸಕ ಯಶ್ವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಅಂಜುಮಾನ್ ಇಸ್ಲಾಂ ಸಂಸ್ಥೆಯ ಬಹುಕಾಲದ ಕನಸಾಗಿದ್ದ ಶಾದಿ ಮಹಲ್ ನಿರ್ಮಾಣ ಕಾರ್ಯವು ಇದೀಗ ಅಂತಿಮ ಹಂತ ತಲುಪಿರುವುದು ಸಂತಸದ ಸಂಗತಿಯಾಗಿದೆ. ಈ ಕಟ್ಟಡವು ಕೇವಲ ಮದುವೆ ಸಮಾರಂಭಗಳಿಗೆ ಮಾತ್ರ ಸೀಮಿತವಾಗದೇ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತ್ಯುತ್ತಮ ವೇದಿಕೆಯಾಗಲಿದೆ ಎಂದು ಹೇಳಿದರು.
ಆಧುನಿಕ ವಿನ್ಯಾಸ ಹಾಗೂ ಅಗತ್ಯ ಸೌಲಭ್ಯಗಳನ್ನು ಒಳಗೊಂಡಂತೆ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಸಮಾಜದ ಎಲ್ಲ ವರ್ಗದ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ರೂಪುಗೊಳ್ಳುತ್ತಿದೆ. ವಿಶಾಲ ಸಭಾಂಗಣ, ಸುಸಜ್ಜಿತ ವ್ಯವಸ್ಥೆ ಹಾಗೂ ಸಾರ್ವಜನಿಕ ಬಳಕೆಗೆ ಅನುಕೂಲಕರವಾದ ಮೂಲಸೌಕರ್ಯಗಳೊಂದಿಗೆ ನಿರ್ಮಾಣಗೊಳ್ಳುತ್ತಿರುವ ಈ ಯೋಜನೆಯು ಇಂಡಿ ನಗರದ ಅಭಿವೃದ್ಧಿಗೆ ಮತ್ತೊಂದು ಹೊಸ ಆಯಾಮ ನೀಡಲಿದೆ ಎಂದು ಅವರು ತಿಳಿಸಿದರು.
ಸಮುದಾಯದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಶಾದಿ ಮಹಲ್ ನಿರ್ಮಾಣದಿಂದ ಸಾಮಾಜಿಕ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ಆಯೋಜಿಸಲು ಅನುಕೂಲವಾಗಲಿದೆ. ಇದರಿಂದ ಸಮಾಜದ ಐಕ್ಯತೆ, ಸಹಕಾರ ಮತ್ತು ಸೌಹಾರ್ದತೆಯ ವಾತಾವರಣ ಮತ್ತಷ್ಟು ಬಲಗೊಳ್ಳಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ಈ ಯೋಜನೆಯು ಮುಂದಿನ ಹಲವು ದಶಕಗಳವರೆಗೆ ಸಮಾಜಕ್ಕೆ ಶಾಶ್ವತ ಆಸ್ತಿಯಾಗಿ ಸೇವೆ ಸಲ್ಲಿಸಲಿದ್ದು, ಯುವ ಪೀಳಿಗೆಗೂ ಉಪಯುಕ್ತವಾಗುವಂತಹ ಕೇಂದ್ರವಾಗಿ ರೂಪುಗೊಳ್ಳಲಿದೆ. ಸಾರ್ವಜನಿಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ಹೇಳಿದರು.
ಇಂಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಅಂಜುಮಾನ್ ಇಸ್ಲಾಂ ಶಾದಿ ಮಹಲ್ ನಿರ್ಮಾಣವೂ ಇದೇ ಅಭಿವೃದ್ಧಿಯ ಸಂಕಲ್ಪದ ಭಾಗವಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರದಿಂದ ಈ ಯೋಜನೆ ಯಶಸ್ವಿಯಾಗಲಿದೆ ಎಂದು ಶಾಸಕ ಯಶ್ವಂತರಾಯಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande