
ವಿಜಯಪುರ, 18 ಜುಲೈ (ಹಿ.ಸ.)
ಆ್ಯಂಕರ : ವಿಜಯಪುರ ಜಿಲ್ಲೆಯ ಮತದಾರರ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸಂದರ್ಭದಲ್ಲಿ ಬಿಎಲ್ಒಗಳ ಕಾರ್ಯವೈಖರಿ ಕುರಿತು ಹಲವು ಗಂಭೀರ ಸಮಸ್ಯೆಗಳನ್ನು ಎತ್ತಿಹಿಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರು, ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕತ್ವದ ಗಮನಕ್ಕೆ ತರಬೇಕೆಂದು ಎಐಸಿಸಿ ಕಾರ್ಯದರ್ಶಿ ಹಾಗೂ ಎಸ್ಐಆರ್ ವೀಕ್ಷಕರಾದ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದರು.
ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ, ಮಾಜಿ ಶಾಸಕಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗೀಯ ಎಸ್ಐಆರ್ ವೀಕ್ಷಕರಾದ ಡಾ. ಅಂಜಲಿ ನಿಂಬಾಳ್ಕರ್ ಅವರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ವಹಿಸಿದ್ದರು. ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ತಮ್ಮ ಅನುಭವಗಳು ಮತ್ತು ಸಮಸ್ಯೆಗಳನ್ನು ವಿವರಿಸಿದರು.
ಸಭೆಯಲ್ಲಿ ಮಾತನಾಡಿದ ಹಲವು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಲವು ಮತಕ್ಷೇತ್ರಗಳಲ್ಲಿ ಬಿಎಲ್ಒಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ಅನೇಕ ಕಡೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್ಒಗಳಾಗಿ ನೇಮಿಸಲಾಗಿದ್ದು, ಅವರಿಗೆ ಅಗತ್ಯ ತರಬೇತಿ ಹಾಗೂ ಮಾಹಿತಿ ಕೊರತೆಯಿದೆ. ಇದರಿಂದ ಮತದಾರರ ನೋಂದಣಿ ಮತ್ತು ಪರಿಶೀಲನಾ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ತಿಳಿಸಿದರು.
ವಿಶೇಷವಾಗಿ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೆಲ ಬಿಎಲ್ಒಗಳು ತಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಿರುವ ಕುರಿತು ಗಂಭೀರ ಆರೋಪ ಕೇಳಿಬಂತು. ಅಲ್ಲದೆ, ಅವರು ಸ್ಥಳೀಯ ಶಾಸಕರ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಚುನಾವಣಾ ಸಂಬಂಧಿತ ಕೆಲಸಗಳಲ್ಲಿ ತಟಸ್ಥತೆ ಕಾಪಾಡಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದರು. ಇದರ ಪರಿಣಾಮವಾಗಿ ಜನರು ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರಶ್ನಿಸುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ಪಕ್ಷದ ಬಿಎಲ್ಎ-2 ಪ್ರತಿನಿಧಿಗಳಿಗೆ ಅಗತ್ಯ ಗೌರವ ಮತ್ತು ಸಹಕಾರ ದೊರೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ ಎಂದು ಬ್ಲಾಕ್ ಅಧ್ಯಕ್ಷರು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಮಾತನಾಡಿ, ಇತ್ತೀಚೆಗೆ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರೊಂದಿಗೆ ಸುಮಾರು ಆರು ದಿನಗಳ ಕಾಲ ಜಿಲ್ಲೆಯ ವಿವಿಧ ಬ್ಲಾಕ್ಗಳಲ್ಲಿ ಸಭೆ ನಡೆಸಿ, ಸ್ಥಳೀಯ ಶಾಸಕರ ಸಹಯೋಗದಲ್ಲಿ ಬಿಎಲ್ಎ-2 ಪ್ರತಿನಿಧಿಗಳಿಗೆ ಎಸ್ಐಆರ್ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. ಈಗ ಬ್ಲಾಕ್ ಅಧ್ಯಕ್ಷರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ರಾಜ್ಯ ಕಾಂಗ್ರೆಸ್ ಸಮಿತಿಯ ಗಮನಕ್ಕೆ ತಂದು, ಪಕ್ಷದ ಕಾರ್ಯಕರ್ತರಿಗೆ ಎದುರಾಗಿರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಹಾಗೂ ಎಸ್ಐಆರ್ ವೀಕ್ಷಕರಾದ ಡಾ. ಅಂಜಲಿ ನಿಂಬಾಳ್ಕರ್, ಬ್ಲಾಕ್ ಅಧ್ಯಕ್ಷರು ಹಾಗೂ ಮುಖಂಡರು ಪ್ರಸ್ತಾಪಿಸಿರುವ ಅಹವಾಲುಗಳನ್ನು ಗಮನದಿಂದ ಆಲಿಸಿದ್ದೇನೆ. ಕೆಲವು ಪ್ರದೇಶಗಳಲ್ಲಿ ಸಮಸ್ಯೆಗಳಿರುವುದು ಸ್ಪಷ್ಟವಾಗಿದೆ. ಈ ಕುರಿತು ಸಮಗ್ರ ವರದಿಯನ್ನು ಕೆಪಿಸಿಸಿ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ 2023ರ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್, ವಿಎಚ್ಡಿಎ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫೀಕ್ ಟಪಾಲ, ಅಬ್ದುಲ್ ರಜಾಕ್ ಹೊರ್ತಿ, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ (ಗಣಿಹಾರ), ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಸೇರಿದಂತೆ ಅನೇಕ ಹಿರಿಯ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಇದಲ್ಲದೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಂ. ಮುಲ್ಲಾ, ವಸಂತ ಹೊನಮೋಡೆ, ದೇಸು ಚವ್ಹಾಣ, ಜಾಕೀರ್ ಮುಲ್ಲಾ, ಸಿದ್ದನಗೌಡ ಪಾಟೀಲ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದು, ಎಸ್ಐಆರ್ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರಕ್ಕಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande