ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಸಚಿವ ಈಶ್ವರ ಖಂಡ್ರೆ ನಿರ್ದೇಶನ
ಗದಗ, 18 ಜುಲೈ (ಹಿ.ಸ.) ಆ್ಯಂಕರ್:- ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ತುರ್ತು ಮತ್ತು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ
ಫೋಟೋ


ಗದಗ, 18 ಜುಲೈ (ಹಿ.ಸ.)

ಆ್ಯಂಕರ್:- ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ತುರ್ತು ಮತ್ತು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಗದಗ ಜಿಲ್ಲಾ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶನಿವಾರ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಅವರು, ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ಭಾನುವಾರ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದಿದ್ದು, ಆ ಸಭೆಯಲ್ಲಿ ಗದಗ ಹಾಗೂ ಬೀದರ್ ಜಿಲ್ಲೆಗಳ ಪರಿಸ್ಥಿತಿಯನ್ನು ವಿಶೇಷವಾಗಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ಬರಪೀಡಿತ ಜಿಲ್ಲೆ ಘೋಷಣೆಗೆ ಚರ್ಚೆ

ಗದಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತೀವ್ರ ಮಳೆಯ ಕೊರತೆಯಾಗಿರುವುದರಿಂದ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಶಾಸಕರು ಹಾಗೂ ಜನಪ್ರತಿನಿಧಿಗಳು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಈಶ್ವರ ಖಂಡ್ರೆ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಜಿಲ್ಲೆಗಳ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದ್ದು, ಈಗಾಗಲೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ವರದಿಯ ಆಧಾರದ ಮೇಲೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕುಡಿಯುವ ನೀರು, ಮೇವು ಪೂರೈಕೆಗೆ ಮೊದಲ ಆದ್ಯತೆ

ಜಿಲ್ಲೆಯಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಮುಂಚಿತ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುಳೆ ತಪ್ಪಿಸಲು ಉದ್ಯೋಗ ಖಾತರಿ

ಬರ ಪರಿಸ್ಥಿತಿಯಿಂದ ಜನರು ಉದ್ಯೋಗ ಅರಸಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಗ್ರಾಮೀಣ ಪ್ರದೇಶಗಳಲ್ಲೇ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಜನರಿಗೆ ಜೀವನೋಪಾಯ ಒದಗಿಸಬೇಕು ಎಂದು ಸಚಿವರು ಸೂಚಿಸಿದರು. ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಲಭ್ಯವಿರುವ ಎಲ್ಲಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕುಡಿಯುವ ನೀರಿನ ಯೋಜನೆಗಳಿಗೆ ತ್ವರಿತ ಅನುಷ್ಠಾನ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಲಜೀವನ ಮಿಷನ್ ಜೊತೆಗೆ ವಿಬಿಜಿ ರಾಮ್ಜಿ ಯೋಜನೆಯಡಿ ಕೂಡ ಅವಕಾಶಗಳಿದ್ದು, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತಕ್ಷಣ ಕಾಮಗಾರಿಗಳನ್ನು ಆರಂಭಿಸಬೇಕು. ಜನರ ಸಂಕಷ್ಟಕ್ಕೆ ಸ್ಪಂದಿಸುವ ರೀತಿಯಲ್ಲಿ ವಿಳಂಬವಿಲ್ಲದೆ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಳೆ ವಿಮೆ ಕಂತು ಪಾವತಿಗೆ ಅವಕಾಶ ಕಲ್ಪಿಸಿ

ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರಿಂದ ಶೇ.82ರಷ್ಟು ಬಿತ್ತನೆ ನಡೆದಿತ್ತು. ಆದರೆ ನಂತರ ಮಳೆ ಕೊರತೆಯಿಂದ ಹೆಸರು, ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳು ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ಬೆಳೆ ವಿಮೆ ರೈತರಿಗೆ ಅತ್ಯಂತ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.

ಕಟ್ ಬಾಕಿ ಇರುವವರು ಹಾಗೂ ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಮಾಡಿಕೊಂಡಿರುವ ರೈತರಿಗೆ ಬೆಳೆ ವಿಮೆ ಕಂತು ಪಾವತಿಸಲು ಅವಕಾಶ ನೀಡದಿರುವುದು ಸರಿಯಲ್ಲ. ಕೆಲವು ಬೆಳೆಗಳಿಗೆ ಜುಲೈ 22ರವರೆಗೆ ಹಾಗೂ ಇನ್ನೂ ಕೆಲವು ಬೆಳೆಗಳಿಗೆ ಜುಲೈ 31ರವರೆಗೆ ವಿಮೆ ಕಂತು ಪಾವತಿಸಲು ಅವಕಾಶ ಇರುವುದರಿಂದ, ರೈತರಿಗೆ ಯಾವುದೇ ತೊಂದರೆ ಆಗದಂತೆ ಲೀಡ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಾಲದ ಕಾರಣಕ್ಕೆ ರೈತರು ವಿಮೆಯಿಂದ ವಂಚಿತರಾಗಬಾರದು

ಸಭೆಯಲ್ಲಿ ಮಾತನಾಡಿದ ಶಾಸಕ ಎಚ್.ಕೆ. ಪಾಟೀಲ್, ರೈತರು ಬೆಳೆ ಸಾಲ ಮರುಪಾವತಿಸಿಲ್ಲ ಎಂಬ ಕಾರಣಕ್ಕೆ ಬೆಳೆ ವಿಮೆಯಿಂದ ವಂಚಿತರಾಗಬಾರದು ಎಂದು ಪ್ರತಿಪಾದಿಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ, ಒಟಿಎಸ್ ಮಾಡಿಕೊಂಡಿರುವ ರೈತರಿಗೆ ಹೊಸ ಖಾತೆ ತೆರೆಯುವ ಮೂಲಕ ಬೆಳೆ ವಿಮೆ ಕಂತು ಪಾವತಿಸಲು ಅವಕಾಶ ಕಲ್ಪಿಸುವಂತೆ ಸಂಬಂಧಿಸಿದ ಬ್ಯಾಂಕ್ಗಳಿಗೆ ಸೂಚನೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ

ಸಭೆಯಲ್ಲಿ ಶಾಸಕರಾದ ಎಚ್.ಕೆ. ಪಾಟೀಲ್, ಜಿ.ಎಸ್. ಪಾಟೀಲ್, ಸಿ.ಸಿ. ಪಾಟೀಲ್, ಡಾ. ಚಂದ್ರು ಲಮಾಣಿ ಹಾಗೂ ಎಸ್.ವಿ. ಸಂಕನೂರು ಅವರುಗಳು ಜಿಲ್ಲೆಯ ಕುಡಿಯುವ ನೀರಿನ ಸ್ಥಿತಿ, ಬರ ನಿರ್ವಹಣೆ, ರೈತರ ಸಂಕಷ್ಟ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸಭೆಗೆ ಮಾಹಿತಿ ವದಗಿಸುತ್ತಾ, ಜಿಲ್ಲೆಯಲ್ಲಿ ಜನವರಿಯಿಂದ ಜುಲೈ 17ರವರೆಗೆ ವಾಡಿಕೆ 229.5 ಮಿ.ಮೀ.ಗೆ ವಿರುದ್ಧವಾಗಿ 227.2 ಮಿ.ಮೀ. ಮಳೆಯಾಗಿದ್ದರೂ, ಜುಲೈ 1ರಿಂದ 17ರವರೆಗೆ ವಾಡಿಕೆ 36.4 ಮಿ.ಮೀ. ಮಳೆಗೆ ಕೇವಲ 21.6 ಮಿ.ಮೀ. ಮಳೆಯಾಗಿದ್ದು, ಶೇ.41ರಷ್ಟು ಮಳೆ ಕೊರತೆ ದಾಖಲಾಗಿದೆ.

ಪ್ರವಾಹ ಮುನ್ನೆಚ್ಚರಿಕಾ ಕ್ರಮವಾಗಿ ಮಲಪ್ರಭಾ ಹಾಗೂ ತುಂಗಭದ್ರಾ ನದಿ ಪಾತ್ರದ 20 ಗ್ರಾಮಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಗುರುತಿಸಲಾಗಿದ್ದು, 43 ಕಾಳಜಿ ಕೇಂದ್ರಗಳನ್ನು ಸಿದ್ಧಗೊಳಿಸಲಾಗಿದೆ. ಜನರ ಸುರಕ್ಷತೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದ್ದು, 51 ಈಜುಗಾರರನ್ನು ತುರ್ತು ರಕ್ಷಣಾ ಕಾರ್ಯಕ್ಕೆ ಸನ್ನದ್ಧವಾಗಿರಿಸಲಾಗಿದೆ.

ಮಳೆ ಹಾಗೂ ಸಿಡಿಲಿನಿಂದ ಮೃತಪಟ್ಟ ನಾಲ್ವರು ಸಂತ್ರಸ್ತರ ಕುಟುಂಬಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹20 ಲಕ್ಷ ಪರಿಹಾರ ವಿತರಿಸಲಾಗಿದೆ. ಭಾಗಶಃ ಹಾನಿಗೊಳಗಾದ 20 ಮನೆಗಳಿಗೆ ₹1.30 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ.

2026-27ರ ಮುಂಗಾರು ಹಂಗಾಮಿನಲ್ಲಿ 3,13,719 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಈಗಾಗಲೇ 2,57,401 ಹೆಕ್ಟೇರ್ (ಶೇ.82.05) ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದ್ದು, ಮೆಕ್ಕೆಜೋಳ, ಹೆಸರು, ಹತ್ತಿ ಹಾಗೂ ಸೂರ್ಯಕಾಂತಿ ಪ್ರಮುಖ ಬೆಳೆಗಳಾಗಿವೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 37,059 ಅರ್ಜಿಗಳ ಮೂಲಕ 38,388 ಹೆಕ್ಟೇರ್ ಪ್ರದೇಶವನ್ನು ವಿಮೆಗೆ ಒಳಪಡಿಸಲಾಗಿದೆ.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ 414 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 276 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ನಗರ ಪ್ರದೇಶದಲ್ಲಿ 1,016 ಬೋರ್ವೆಲ್ಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದವುಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ.

ಜುಲೈ ತಿಂಗಳಲ್ಲಿ ಮಳೆ ಕೊರತೆ ಇದ್ದರೂ ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ನದಿ ಪಾತ್ರದ ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸಮೀರ್ ಶುಕ್ಲ, ಆಯುಕ್ತೆ ದಿವ್ಯ ಪ್ರಭು, ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೇಂಕಟೇಶ್, ಜಿಲ್ಲಾಧಿಕಾರಿ ಸಿ.ಎಸ್. ಶ್ರೀಧರ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande