
ನವದೆಹಲಿ, 18 ಜುಲೈ (ಹಿ.ಸ.):
ಆ್ಯಂಕರ್:ಜಂತರ್‌ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಕಾಕ್‌ರೋಚ್ ಜನತಾ ಪಕ್ಷ (ಸಿಜೆಪಿ) ತೀವ್ರವಾಗಿ ಖಂಡಿಸಿದೆ.
ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪಕೆ, ತಮ್ಮ ಅನುಪಸ್ಥಿತಿಯಲ್ಲಿ ದೆಹಲಿ ಪೊಲೀಸರು ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಕರೆದೊಯ್ದಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಸ್ಥಳದಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಪೊಲೀಸರು ತಳ್ಳಾಟ ನಡೆಸಿದ್ದಾರೆ ಎಂದು ದೂರಿದ್ದು, ಪ್ರತಿಭಟನೆ ಮುಂದುವರಿಯಲಿದ್ದು, ಇಂದಿನಿಂದ ತಾವೂ ಉಪವಾಸ ಆರಂಭಿಸುವುದಾಗಿ ತಿಳಿಸಿದರು.
ಪಕ್ಷದ ರಾಷ್ಟ್ರೀಯ ವಕ್ತಾರ ಸೌರವ್ ದಾಸ್, ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಹೈಕೋರ್ಟ್ ಆದೇಶವೆಂದು ಪೊಲೀಸರು ತಪ್ಪಾಗಿ ವ್ಯಾಖ್ಯಾನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಹೈಕೋರ್ಟ್ ನಿರ್ದೇಶನ ಹಾಗೂ ಸೋನಂ ವಾಂಗ್‌ಚುಕ್ ಅವರ ಆರೋಗ್ಯ ಹದಗೆಡುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಅಡ್ಡಿಪಡಿಸಿದ್ದು, ಎಲ್ಲರೂ ಶಾಂತಿಯುತವಾಗಿ ಜಂತರ್‌ಮಂತರ್ ಪ್ರದೇಶವನ್ನು ಖಾಲಿ ಮಾಡುವಂತೆ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.