ಪ್ರಜಾಪ್ರಭುತ್ವದ ಮೂಲ ಆಶಯ ಅರಿತು ಉತ್ತಮ ಪ್ರಜೆಗಳಾಗಬೇಕು: ಶಿವಚಂದ್ರ ಕತ್ನಳ್ಳಿ
ವಿಜಯಪುರ, 18 ಜುಲೈ (ಹಿ.ಸ.) ಆ್ಯಂಕರ್ : ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಪ್ರಜೆಗಳಾಗಿರುವುದರಿಂದ, ಶಾಲಾ ಶಿಕ್ಷಣದೊಂದಿಗೆ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಹೊಂದುವುದು ಅತ್ಯಂತ ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾ ಪಂಚಾಯಿತಿಯ ಜಿಲ್
ಶಾಲೆ


ವಿಜಯಪುರ, 18 ಜುಲೈ (ಹಿ.ಸ.)

ಆ್ಯಂಕರ್ : ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಪ್ರಜೆಗಳಾಗಿರುವುದರಿಂದ, ಶಾಲಾ ಶಿಕ್ಷಣದೊಂದಿಗೆ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಹೊಂದುವುದು ಅತ್ಯಂತ ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಶಿವಚಂದ್ರ ಕತ್ನಳ್ಳಿ ಹೇಳಿದರು.

ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ವಿವಿಧ ಸಂಘಗಳ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಸಂಸತ್ತು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರಿಚಯಿಸುವ ಅತ್ಯುತ್ತಮ ವೇದಿಕೆಯಾಗಿದೆ. ಚುನಾವಣೆ, ನಾಯಕತ್ವ, ಜವಾಬ್ದಾರಿ ಮತ್ತು ಶಿಸ್ತಿನ ಮೌಲ್ಯಗಳನ್ನು ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಅಳವಡಿಸಿಕೊಂಡರೆ, ಅವರು ಭವಿಷ್ಯದಲ್ಲಿ ಸಮಾಜಕ್ಕೆ ಆದರ್ಶ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಾಲೆಗಳಲ್ಲಿ ಪಠ್ಯ ಜ್ಞಾನದ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಬೇಕಿದೆ.

ನಾಯಕತ್ವ, ಸಮಯಪ್ರಜ್ಞೆ, ತಂಡದೊಂದಿಗೆ ಕೆಲಸ ಮಾಡುವ ಮನೋಭಾವ ಹಾಗೂ ಸಾರ್ವಜನಿಕ ಸೇವೆಯ ಗುಣಗಳು ಶಾಲಾ ಸಂಸತ್ತಿನಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಬೆಳೆಯುತ್ತವೆ. ಇಂತಹ ಕಾರ್ಯಕ್ರಮಗಳು ಮಕ್ಕಳ ಆತ್ಮವಿಶ್ವಾಸವನ್ನು ವೃದ್ಧಿಸಿ, ಅವರಲ್ಲಿರುವ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಹಿರಿಯ ಪತ್ರಕರ್ತ ಸುಶಿಲೇಂದ್ರ ನಾಯಕ ಭಾಷಾ ಸಂಘದ ಸದಸ್ಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿ, ಶ್ರೀ ಮಲ್ಲಿಕಾರ್ಜುನ ಶಾಲೆಯ ವಿದ್ಯಾರ್ಥಿಗಳು ಶಿಸ್ತು, ಸಂಸ್ಕಾರ ಹಾಗೂ ಅಧ್ಯಯನದಲ್ಲಿ ಮಾದರಿಯಾಗಿದ್ದಾರೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಮಾನ ಆಸಕ್ತಿ ತೋರಿಸುವ ಮೂಲಕ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಶಾಲಾ ಸಂಸತ್ತು ಮಕ್ಕಳಲ್ಲಿ ನಾಯಕತ್ವದ ಗುಣ, ಶಿಸ್ತು ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸಿದರೆ, ಸಾಂಸ್ಕೃತಿಕ ಚಟುವಟಿಕೆಗಳು ಅವರ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ವೃದ್ಧಿಸುತ್ತವೆ. ಶಿಕ್ಷಣ ಎಂದರೆ ಕೇವಲ ಪುಸ್ತಕದ ಜ್ಞಾನವಲ್ಲ; ಜೀವನ ಕೌಶಲ್ಯಗಳನ್ನು ಬೆಳೆಸುವ ಪ್ರಕ್ರಿಯೆಯೂ ಆಗಿದೆ. ಈ ನಿಟ್ಟಿನಲ್ಲಿ ಶಾಲೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತಮ ವೇದಿಕೆಯನ್ನು ನಿರ್ಮಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ವಹಿಸಿದ್ದರು. ಶಾಲಾ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಿಕ್ಷಣಾಧಿಕಾರಿ ಶಿವಚಂದ್ರ ಕತ್ನಳ್ಳಿ ಅವರು ಪ್ರಮಾಣ ವಚನ ಬೋಧಿಸಿದರು.

ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ (ಕಾನಿಪ) ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ ಕುಲಕರ್ಣಿ ಹಾಗೂ ಕಾನಿಪ ರಾಷ್ಟ್ರೀಯ ಮಂಡಳಿ ಸದಸ್ಯ ಶರಣು ಮಸಳಿ ಅವರು ಸಾಂಸ್ಕೃತಿಕ ಸಂಘ, ಕ್ರೀಡಾ ಸಂಘ, ಗಣಿತ ಸಂಘ ಹಾಗೂ ವಿಜ್ಞಾನ ಸಂಘದ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಸೇವೆಯನ್ನು ಗುರುತಿಸಿ ಶಿವಚಂದ್ರ ಕತ್ನಳ್ಳಿ, ಸುಶಿಲೇಂದ್ರ ನಾಯಕ, ಮೋಹನ ಕುಲಕರ್ಣಿ ಹಾಗೂ ಶರಣು ಮಸಳಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ದೈಹಿಕ ಶಿಕ್ಷಣ ಶಿಕ್ಷಕ ಎಂ.ಎಸ್. ಪಾಪನಾಳಮಠ, ಶಿಕ್ಷಕರಾದ ಸಿದ್ದು ರತ್ನಾಕರ, ಈರಣ್ಣ, ಜಯಶ್ರೀ ಬಂಗಾರಿ, ಸ್ನೇಹಾ ಹಕ್ಕಿ, ರೇಣುಕಾ ಭಜಂತ್ರಿ, ಕಮರೂನ್ ಮಂಗಳೂರು, ವೀರೇಶ ಹುಣಶ್ಯಾಳ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

ಶಾಲೆಯ ಮುಖ್ಯೋಪಾಧ್ಯಾಯ ಸುರೇಶಗೌಡ ಬಿರಾದಾರ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ಮಸೂತಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ರಿಜ್ವಾನ್ ಬೇಗಂ ಮನಿಯಾರ ವಂದಿಸಿದರು.

ಶಾಲಾ ಸಂಸತ್ತಿನ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದವು. ಕಾರ್ಯಕ್ರಮವು ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನದ ಮಹತ್ವವನ್ನು ಸಾರುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande