ಬರ ಪರಿಸ್ಥಿತಿ ಪರಿಶೀಲನೆಗೆ ನಾಳೆ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ಸಭೆ
ಬೆಂಗಳೂರು, 18 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಮಳೆಗಾಲದ ಬೆಳವಣಿಗೆ, ಕುಡಿಯುವ ನೀರಿನ ಲಭ್ಯತೆ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಜಿಲ್ಲಾಧಿಕಾರಿಗಳು (ಡಿಸಿ) ಹಾಗೂ ಜಿಲ್ಲಾ ಪಂಚಾಯತ್ ಮುಖ
ಬರ ಪರಿಸ್ಥಿತಿ ಪರಿಶೀಲನೆಗೆ ನಾಳೆ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ಸಭೆ


ಬೆಂಗಳೂರು, 18 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಮಳೆಗಾಲದ ಬೆಳವಣಿಗೆ, ಕುಡಿಯುವ ನೀರಿನ ಲಭ್ಯತೆ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಜಿಲ್ಲಾಧಿಕಾರಿಗಳು (ಡಿಸಿ) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ (ಸಿಇಒ) ವಿಡಿಯೋ ಸಂವಾದ ನಡೆಸಲಿದ್ದಾರೆ. ನಂತರ ತುರ್ತು ಸಚಿವ ಸಂಪುಟ ಸಭೆಯಲ್ಲೂ ಇದೇ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬರದ ಆತಂಕ ಎದುರಾಗಿದ್ದು, ಪರಿಸ್ಥಿತಿಯ ನೈಜ ಚಿತ್ರಣವನ್ನು ಅಧಿಕಾರಿಗಳಿಂದ ಪಡೆಯಲಾಗುವುದು ಎಂದರು. ಬರದಿಂದ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಅರಸಿ ಬೇರೆಡೆಗೆ ಗುಳೆ ಹೋಗುವ ಪರಿಸ್ಥಿತಿ ಉಂಟಾಗದಂತೆ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಮಳೆಯ ಪ್ರಮಾಣ, ಕುಡಿಯುವ ನೀರಿನ ಸಂಗ್ರಹ, ಬೆಳೆ ಪರಿಸ್ಥಿತಿ ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಂಪೂರ್ಣ ಅಂಕಿಅಂಶಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ. ಅಗತ್ಯ ನೆರವು ಮತ್ತು ಸಹಕಾರಕ್ಕಾಗಿ ಕೇಂದ್ರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗಿದೆ. ಜಲಾಶಯಗಳಲ್ಲಿರುವ ನೀರನ್ನು ಕೃಷಿ ಉದ್ದೇಶಕ್ಕೆ ಬಳಸುವ ಮುನ್ನ ಕುಡಿಯುವ ನೀರಿನ ಅಗತ್ಯವನ್ನು ಖಚಿತಪಡಿಸಿಕೊಳ್ಳಬೇಕು. ಜಲಾಶಯಗಳು ಸಮರ್ಪಕವಾಗಿ ಭರ್ತಿಯಾದ ಬಳಿಕ ಮಾತ್ರ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಬಿಡುಗಡೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಕುಡಿಯುವ ನೀರನ್ನು ಕೃಷಿಗೆ ಬಳಸಿಕೊಂಡು ನಂತರ ಬಿತ್ತನೆ ಮತ್ತು ನಾಟಿ ಕಾರ್ಯಗಳಿಗೆ ಸರ್ಕಾರದ ಮೇಲೆ ಒತ್ತಡ ತರಬಾರದು. ಪರಿಸ್ಥಿತಿಯನ್ನು ಪರಿಶೀಲಿಸಿ ರೈತರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು, ಎಂದು ಮುಖ್ಯಮಂತ್ರಿ ಹೇಳಿದರು.

ಕಾವೇರಿ ಹಾಗೂ ತುಂಗಭದ್ರಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ನೆರೆಯ ರಾಜ್ಯಗಳಿಂದ ಒತ್ತಡವಿದೆ. ಈ ಹಿನ್ನೆಲೆಯಲ್ಲಿ ನೀರಿನ ಲಭ್ಯತೆ ಮತ್ತು ನ್ಯಾಯಯುತ ಹಂಚಿಕೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕಾವೇರಿ ನೀರು ಹಂಚಿಕೆ ವಿಷಯ ಪ್ರಸ್ತಾಪವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ರಾಜ್ಯದ ಪರ ವಾಸ್ತವಾಂಶಗಳನ್ನು ಎಲ್ಲ ಸಂಸದರಿಗೆ ನೀಡಲಾಗುವುದು. ಅಗತ್ಯವಿದ್ದರೆ ತಾವೇ ನವದೆಹಲಿಗೆ ತೆರಳಿ ರಾಜ್ಯದ ನಿಲುವನ್ನು ಮಂಡಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಕಾವೇರಿ ನೀರು ಕರ್ನಾಟಕದ ಹಕ್ಕು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರಗಳನ್ನು ಗೌರವಿಸುತ್ತಾ ರಾಜ್ಯದ ಹಕ್ಕು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಮೇಕೆದಾಟು ಅಣೆಕಟ್ಟು ಯೋಜನೆ ಕರ್ನಾಟಕಕ್ಕಷ್ಟೇ ಅಲ್ಲ, ತಮಿಳುನಾಡಿಗೂ ಪ್ರಯೋಜನಕಾರಿಯಾಗಿದೆ, ಎಂದು ಅವರು ಹೇಳಿದರು.

ಹೆಚ್‌ಎಂಟಿ ಭೂಮಿ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ. ಅವರು ತಮ್ಮ ರಾಜಕೀಯ ಉದ್ದೇಶಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ಅವರು ಪಾದಯಾತ್ರೆ ಮಾಡಲಿ ಅಥವಾ ಚರ್ಚೆ ನಡೆಸಲಿ, ಅದು ಅವರ ವಿಚಾರ, ಎಂದು ತಿರುಗೇಟು ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande