
ಗದಗ, 19 ಜುಲೈ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಬಿಎಲ್ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಗನವಾಡಿ ಶಿಕ್ಷಕಿ ರತ್ನವ್ವ ಬಳಿಗೇರ (40) ಅವರು ಕರ್ತವ್ಯದಲ್ಲಿದ್ದ ವೇಳೆ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆ ಸರ್ಕಾರಿ ಸಿಬ್ಬಂದಿ ವಲಯದಲ್ಲಿ ಆತಂಕ ಮತ್ತು ದುಃಖದ ವಾತಾವರಣ ಸೃಷ್ಟಿಸಿದೆ.
ಮೃತ ರತ್ನವ್ವ ಬಳಿಗೇರ ಅವರು ಬಾಗೇವಾಡಿ ಗ್ರಾಮದ ಅಂಗನವಾಡಿ ಶಿಕ್ಷಕಿಯಾಗಿದ್ದು, ಚುನಾವಣಾ ಸಂಬಂಧಿತ ಬಿಎಲ್ಓ ಕರ್ತವ್ಯವನ್ನೂ ನಿರ್ವಹಿಸುತ್ತಿದ್ದರು. ಕರ್ತವ್ಯದಲ್ಲಿದ್ದ ವೇಳೆ ಏಕಾಏಕಿ ಅವರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ರಕ್ತದೊತ್ತಡ (ಲೋ ಬಿಪಿ) ಕುಸಿದ ಹಿನ್ನೆಲೆಯಲ್ಲಿ ತಕ್ಷಣವೇ ಮುಂಡರಗಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮುಂಡರಗಿ ತಹಶೀಲ್ದಾರ ಪಿ.ಎಸ್. ಯರ್ರಿಸ್ವಾಮಿ, ಸಿಪಿಐ ಐಯ್ಯನಗೌಡ ಸೇರಿದಂತೆ ಹಲವು ಅಧಿಕಾರಿಗಳು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡರು. ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಈ ಮಧ್ಯೆ, ಇತ್ತೀಚಿನ ದಿನಗಳಲ್ಲಿ ಬಿಎಲ್ಓ ಸಿಬ್ಬಂದಿಯ ಮೇಲೆ ಹೆಚ್ಚಿದ ಕೆಲಸದ ಒತ್ತಡ, ನಿರಂತರ ಸಭೆಗಳು, ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಣೆ ಸೇರಿದಂತೆ ವಿವಿಧ ಜವಾಬ್ದಾರಿಗಳಿಂದ ಸಿಬ್ಬಂದಿ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ರತ್ನವ್ವ ಅವರ ಸಾವಿಗೂ ಇದೇ ರೀತಿಯ ಮೇಲಾಧಿಕಾರಿಗಳ ಒತ್ತಡ ಕಾರಣವಾಗಿರಬಹುದೆಂಬ ಶಂಕೆಯನ್ನು ಕೆಲ ಸಿಬ್ಬಂದಿ ಹಾಗೂ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಅಧಿಕಾರಿಗಳು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ರತ್ನವ್ವ ಬಳಿಗೇರ ಅವರ ಅಕಾಲಿಕ ನಿಧನದಿಂದ ಬಾಗೇವಾಡಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಗ್ರಾಮಸ್ಥರು, ಅಂಗನವಾಡಿ ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಸರ್ಕಾರಿ ನೌಕರರ ಸಂಘದ ಕೆಲ ಪ್ರತಿನಿಧಿಗಳು, ಬಿಎಲ್ಓ ಸೇರಿದಂತೆ ವಿವಿಧ ಹೆಚ್ಚುವರಿ ಜವಾಬ್ದಾರಿಗಳನ್ನು ನಿರ್ವಹಿಸುವ ಸಿಬ್ಬಂದಿಯ ಕೆಲಸದ ಒತ್ತಡವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಘಟನೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ಮತ್ತು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಮೇಲಾಧಿಕಾರಿಗಳ ಒತ್ತಡವೇ ಸಾವಿಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದ್ದರೂ, ಅದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
---------------
ಹಿಂದೂಸ್ತಾನ್ ಸಮಾಚಾರ್ / lalita MP