
ಹುಬ್ಬಳ್ಳಿ, 19 ಜುಲೈ (ಹಿ.ಸ.):
ಆ್ಯಂಕರ್:
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ದಿವ್ಯಾಂಗ-ವಯೋಶ್ರೀ ಕೇಂದ್ರ (ಪಿಎಂಡಿವಿಕೆ) ವತಿಯಿಂದ, ಭಾರತ ಸರ್ಕಾರದ ಅಧೀನದ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಮ್ಕೊ) ಸಹಯೋಗದಲ್ಲಿ ದಿವ್ಯಾಂಗರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಹಾಯಕ ಸಾಧನಗಳನ್ನು ವಿತರಿಸಲಾಯಿತು.
ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದರ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು 42 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನಗಳು ಸೇರಿದಂತೆ ವಿವಿಧ ವೈದ್ಯಕೀಯ ಸಾಧನ-ಸಲಕರಣೆಗಳನ್ನು ವಿತರಿಸಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ವಿಶೇಷ ಪ್ರಯತ್ನದಿಂದ ಆರಂಭವಾದ ಪ್ರಧಾನ ಮಂತ್ರಿ ದಿವ್ಯಾಂಗ-ವಯೋಶ್ರೀ ಕೇಂದ್ರವು ಕಳೆದ ಒಂದೂವರೆ ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲಿ 7,000ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸುಮಾರು 4 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಯೋಶ್ರೀ ಹಾಗೂ ದಿವ್ಯಾಂಗಚೇತನರ ಸಹಾಯಕ ಸಾಧನಗಳನ್ನು ವಿತರಿಸಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಎಂ. ನಾಗರಾಜ್, ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ದುರ್ಗಮ್ಮ ಶಶಿಕಾಂತ ಬಿಜವಾಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.