
ಬೆಂಗಳೂರು, 19 ಜುಲೈ (ಹಿ.ಸ.):
ಆ್ಯಂಕರ್:
ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ದೊಡ್ಡ ಹೊಡೆತ ನೀಡಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು.
ಭಾನುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಿಂದ 2026ರವರೆಗೆ ದೇಶದಲ್ಲಿ 152 ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದು, ಇದರಿಂದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು. ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲೇ ಇಂತಹ ಪ್ರಕರಣಗಳು ಹೆಚ್ಚಾಗಿ ನಡೆದಿವೆ ಎಂದು ಆರೋಪಿಸಿದ ಅವರು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆ ವಿದ್ಯಾರ್ಥಿಗಳಷ್ಟೇ ಅಲ್ಲ, ಅವರ ಕುಟುಂಬಗಳ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಮಕ್ಕಳ ಶಿಕ್ಷಣಕ್ಕಾಗಿ ಪೋಷಕರು ಸಾಕಷ್ಟು ತ್ಯಾಗ ಮಾಡುತ್ತಿರುವ ಸಂದರ್ಭದಲ್ಲಿ ಇಂತಹ ಅಕ್ರಮಗಳು ಅವರ ಭವಿಷ್ಯವನ್ನು ಹಾಳು ಮಾಡುತ್ತಿವೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ ದೇಶಕ್ಕೆ ಉತ್ತರ ನೀಡಬೇಕು. ಎಷ್ಟು ಪ್ರಕರಣಗಳ ತನಿಖೆ ಪೂರ್ಣಗೊಂಡಿದೆ, ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ ಹಾಗೂ ಈ ಅಕ್ರಮಗಳ ಹಿಂದಿರುವ ಸಂಚುಕೋರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆಯ ಕುಸಿತದ ಬಗ್ಗೆ ಗಂಭೀರತೆ ತೋರಿಸುತ್ತಿಲ್ಲ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಹರಿಪ್ರಸಾದ್ ಆಗ್ರಹಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ರಾಷ್ಟ್ರೀಯ ತನಿಖೆ ನಡೆಸಬೇಕು. ತನಿಖೆಯ ಮೇಲೆ ಯಾವುದೇ ರಾಜಕೀಯ ಪ್ರಭಾವ ಇರಬಾರದು ಹಾಗೂ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂದು ಅವರು ಒತ್ತಾಯಿಸಿದರು.
ಈ ವಿಚಾರದಲ್ಲಿ ಕಾಂಗ್ರೆಸ್ ದೇಶಾದ್ಯಂತ ಹೋರಾಟ ಮುಂದುವರಿಸಲಿದ್ದು, ಕರ್ನಾಟಕದಲ್ಲಿಯೂ ವಿದ್ಯಾರ್ಥಿಗಳ ಪರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದೇ ವೇಳೆ ರಾಹುಲ್ ಗಾಂಧಿ ಅವರು ಕರ್ನಾಟಕದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವಂತೆ ಮನವಿ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ನೀತಿ, ನೀಟ್ ಪರೀಕ್ಷೆ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.