ಈಶಾನ್ಯ ರಾಜ್ಯಗಳ ಪ್ರವಾಹ ಪರಿಸ್ಥಿತಿಗೆ ಖರ್ಗೆ ಕಳವಳ
ನವದೆಹಲಿ, 02 ಜುಲೈ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಹಾಗೂ ಸಿಕ್ಕಿಂ ರಾಜ್ಯಗಳಲ್ಲಿ ಉಂಟಾಗಿರುವ ಭೀಕರ ಪ್ರವಾಹ ಮತ್ತು ಭೂಕುಸಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಪ್ರಕೃತಿ ವಿಕೋಪದಲ್ಲಿ ಹಲವರು ಮೃತಪಟ್ಟಿದ್ದು,
ಖರ್ಗೆ ಸಂಗ್ರಹ ಚಿತ್ರ


ನವದೆಹಲಿ, 02 ಜುಲೈ (ಹಿ.ಸ.):

ಆ್ಯಂಕರ್:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಹಾಗೂ ಸಿಕ್ಕಿಂ ರಾಜ್ಯಗಳಲ್ಲಿ ಉಂಟಾಗಿರುವ ಭೀಕರ ಪ್ರವಾಹ ಮತ್ತು ಭೂಕುಸಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಪ್ರಕೃತಿ ವಿಕೋಪದಲ್ಲಿ ಹಲವರು ಮೃತಪಟ್ಟಿದ್ದು, ಸಾವಿರಾರು ಕುಟುಂಬಗಳು ನಿರಾಶ್ರಿತರಾಗಿವೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಖರ್ಗೆ, ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿ, ಈ ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಯೊಬ್ಬ ಸಂತ್ರಸ್ತರೊಂದಿಗೂ ದೃಢವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.

ಎನ್‌ಡಿಎ ಸರ್ಕಾರಗಳು ನೀಡಿದ್ದ ಭರವಸೆಗಳು ಹಾಗೂ 2016ರ ಅಸ್ಸಾಂ ದೃಷ್ಟಿಪತ್ರದಲ್ಲಿ ರಾಜ್ಯವನ್ನು ಪ್ರವಾಹ ಮುಕ್ತಗೊಳಿಸುವುದಾಗಿ ನೀಡಿದ್ದ ಆಶ್ವಾಸನೆಗಳು ಈಡೇರಿಲ್ಲ ಎಂದು ಖರ್ಗೆ ಆರೋಪಿಸಿದರು. ಅಸ್ಸಾಂನಲ್ಲಿ ಪ್ರವಾಹವು ಪ್ರತಿವರ್ಷದ ದುರಂತವಾಗಿ ಮಾರ್ಪಟ್ಟಿದ್ದರೂ, ಸರ್ಕಾರದ ಸಿದ್ಧತೆ ಮತ್ತು ದೀರ್ಘಕಾಲೀನ ಪರಿಹಾರ ಕ್ರಮಗಳು ಸಮರ್ಪಕವಾಗಿಲ್ಲ ಎಂದು ಟೀಕಿಸಿದರು.

ಪ್ರವಾಹ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲು ಪಿಎಂ ಕೇರ್ಸ್ ನಿಧಿಯನ್ನು ಬಳಸಬೇಕು. ಸಂತ್ರಸ್ತ ಕುಟುಂಬಗಳಿಗೆ ಸಮರ್ಪಕ ಪರಿಹಾರಧನ, ಸಮಗ್ರ ಪುನರ್ವಸತಿ ಹಾಗೂ ನಿರಂತರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ದೇಶದ ಸಶಸ್ತ್ರ ಪಡೆಗಳು, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ನಿರಂತರವಾಗಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಖರ್ಗೆ, ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಕೇಂದ್ರ ಸರ್ಕಾರವು ಹೆಚ್ಚಿನ ಸಂಪನ್ಮೂಲ, ಆರ್ಥಿಕ ನೆರವು ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ರಕ್ಷಣಾ ಕಾರ್ಯಗಳನ್ನು ಮತ್ತಷ್ಟು ವೇಗಗೊಳಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಸಾಧ್ಯವಾದ ಎಲ್ಲ ರೀತಿಯ ನೆರವು ನೀಡುವಂತೆ ಖರ್ಗೆ ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande