
ಬಾಗಲಕೋಟೆ, 02 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮಿಷನ್ ಯೋಜನೆಯ ಅನುದಾನದಡಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಶಾಸಕ ಉಮೇಶ್ ಮೇಟಿ ಭೂಮಿ ಪೂಜೆ ನೆರವೇರಿಸಿದರು.
ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಹಾಗೂ ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಆರೋಗ್ಯ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಟ್ಟಡ ನಿರ್ಮಾಣ ಪೂರ್ಣಗೊಂಡ ಬಳಿಕ ಪ್ರಾಥಮಿಕ ಆರೋಗ್ಯ ಸೇವೆಗಳು, ತಾಯಿ-ಮಗು ಆರೈಕೆ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗಲಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮೀಣ ಜನರ ಆರೋಗ್ಯವೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಆರೋಗ್ಯ ಕ್ಷೇತ್ರದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಂತಹ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಹಳ್ಳೂರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಮಂದಿರವು ಸ್ಥಳೀಯ ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಕೇಂದ್ರವಾಗಲಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ಇದರ ಪ್ರಯೋಜನ ದೊರೆಯಲಿದೆ ಎಂದು ತಿಳಿಸಿದರು.
ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಸಮರ್ಪಿತವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ ಅವರು, ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತಾಗುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾಮಗಾರಿಗೆ ಶುಭ ಹಾರೈಸಿದರು. ಆರೋಗ್ಯ ಸೇವೆಗಳನ್ನು ಗ್ರಾಮೀಣ ಮಟ್ಟದಲ್ಲೇ ಪರಿಣಾಮಕಾರಿಯಾಗಿ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಮೈಲಿಗಲ್ಲಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande