
ಗದಗ, 02 ಜುಲೈ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದ ಕೃಷಿ ಸಂಪೂರ್ಣ sಸಂಕಷ್ಟಕ್ಕೆ ಸಿಲುಕಿದ್ದು, ಅನ್ನದಾತರು ಆರ್ಥಿಕವಾಗಿ ತೀವ್ರ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರ ಯಾವುದೇ ವಿಳಂಬ ಮಾಡದೆ ಕೃಷಿ ಹಾಗೂ ಕಂದಾಯ ಇಲಾಖೆಗಳ ಜಂಟಿ ಸಮೀಕ್ಷೆ ನಡೆಸಿ, ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ಹಾಗೂ ಇನ್ಪುಟ್ ಸಬ್ಸಿಡಿ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಗದಗ ಜಿಲ್ಲಾಧ್ಯಕ್ಷ ಡಿ. ವೈ. ಹುನಗುಂದ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಅವರು ಮಾತನಾಡಿ, ಜಿಲ್ಲೆಯ ಲಕ್ಷ್ಮೇಶ್ವರ, ಶಿರಹಟ್ಟಿ, ಗದಗ, ರೋಣ, ಮುಂಡರಗಿ ಹಾಗೂ ನರಗುಂದ ತಾಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವ ಪರಿಣಾಮ ಹೆಸರು, ಮೆಣಸಿನಕಾಯಿ, ಶೇಂಗಾ, ಈರುಳ್ಳಿ, ಹತ್ತಿ ಹಾಗೂ ಮೆಕ್ಕೆಜೋಳ ಸೇರಿದಂತೆ ಪ್ರಮುಖ ಬೆಳೆಗಳು ಒಣಗಿ ಸಂಪೂರ್ಣ ನಾಶವಾಗಿವೆ. ಅಪಾರ ವೆಚ್ಚ ಮಾಡಿ ಬೆಳೆ ಬೆಳೆದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಗೆ ತಲುಪಿದ್ದು, ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಹಾಗೂ ಜಿಲ್ಲೆಯ ಕಾಂಗ್ರೆಸ್ ಶಾಸಕರ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದ ಅವರು, ಜಿಲ್ಲೆಯ ರೈತರು ಬರದ ಬೇಗೆಯಲ್ಲಿ ಕಣ್ಣೀರು ಹಾಕುತ್ತಿರುವಾಗ ಕಾಂಗ್ರೆಸ್ ಶಾಸಕರು ಮೌನ ವಹಿಸಿರುವುದು ಅತ್ಯಂತ ದುರದುಷ್ಟಕರ. ರೈತರ ಪರವಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು ಜನಪ್ರತಿನಿಧಿಗಳು ಕೈಕಟ್ಟಿ ಕುಳಿತಿರುವುದು ಖಂಡನೀಯ. ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ತಕ್ಷಣ ಜಂಟಿ ಸಮೀಕ್ಷೆ ನಡೆಸಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ವಿಶೇಷ ತಂಡಗಳನ್ನು ಕಳುಹಿಸಿ ಬೆಳೆ ಹಾನಿಯ ನಿಖರ ಸಮೀಕ್ಷೆ ನಡೆಸಬೇಕು. ಹೆಕ್ಟೇರ್ ಆಧಾರದ ಮೇಲೆ ಇನ್ಪುಟ್ ಸಬ್ಸಿಡಿಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು. ತೀವ್ರ ನಷ್ಟ ಅನುಭವಿಸಿರುವ ರೈತರ ಕೃಷಿ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವಿನ ಬ್ಯಾಂಕ್ಗಳನ್ನು ತಕ್ಷಣ ಆರಂಭಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ, 2025–26ನೇ ಸಾಲಿನ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಾಕಿ ಉಳಿದಿರುವ ಬೆಳೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಆಡಳಿತಕ್ಕೆ ಆಗ್ರಹಿಸಿದರು.
ಅದರೊಂದಿಗೆ, 2026–27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (Pಒಈಃಙ) ಅಡಿಯಲ್ಲಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಮಹತ್ವದ ಸೂಚನೆ ನೀಡಿದರು. ಬ್ಯಾಂಕ್ಗಳಲ್ಲಿ ಕೃಷಿ ಸಾಲ ಪಡೆದು ನಂತರ ಅರ್ಜಿ ಸಲ್ಲಿಸಿದ ಕೆಲವು ರೈತರು, ಮತ್ತೆ ಸಾಲ ಪಡೆಯದ ರೈತರಾಗಿ ಸಿಎಸ್ಸಿ ಅಥವಾ ಗ್ರಾಮ್ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆದ್ದರಿಂದ ಸಾಲ ಪಡೆಯದ ಎಲ್ಲಾ ರೈತರು ಬೆಳೆ ವಿಮೆ ನೋಂದಣಿ ವೇಳೆ ತಮ್ಮ ಹೆಸರಿನಲ್ಲಿ ಯಾವುದೇ ಕಿಸಾನ್ ಕ್ರೆಡಿಟ್ ಕಾರ್ಡ್ ಅಥವಾ ಕೃಷಿ ಸಾಲ ಮಂಜೂರಾಗಿಲ್ಲ ಎಂಬ ಸ್ವಯಂ-ಘೋಷಣೆ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಸಂಬಂಧಿಸಿದ ಅರ್ಜಿ ನಮೂನೆಗಳು ಸಿಎಸ್ಸಿ ಹಾಗೂ ಗ್ರಾಮ್ಒನ್ ಕೇಂದ್ರಗಳಲ್ಲಿ ಲಭ್ಯವಿದ್ದು, ರೈತರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಮಯಕ್ಕೆ ಸರಿಯಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸದಿದ್ದಲ್ಲಿ, ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಡಿ. ವೈ. ಹುನಗುಂದ ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP