ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಅನೈತಿಕ ಸಂಬಂಧ ಹಿನ್ನೆಲೆ ಕೊಲೆ ಆರೋಪ – ಮೂವರು ವಶಕ್ಕೆ
ಬಾಗಲಕೋಟೆ, 02 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಆರ್ಸಿ ಪ್ಲಾಟ್ನಲ್ಲಿ 27 ವರ್ಷದ ಯುವಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತನ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಅನೈತಿಕ ಸಂಬಂಧದ ಹಿನ್ನೆಲೆಯಲ್
ಸೂಸೈಡ್


ಬಾಗಲಕೋಟೆ, 02 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಆರ್ಸಿ ಪ್ಲಾಟ್ನಲ್ಲಿ 27 ವರ್ಷದ ಯುವಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತನ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ.

ಮೃತ ಯುವಕನನ್ನು ಮಲ್ಲಪ್ಪ ಕಬ್ಬೂರ (27) ಎಂದು ಗುರುತಿಸಲಾಗಿದೆ. ಚಿಕ್ಕಪಡಸಲಗಿ ಆರ್ಸಿ ಪ್ಲಾಟ್ನ ಮನೆಯೊಂದರಲ್ಲಿ ಮಲ್ಲಪ್ಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಸಾವಳಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಪ್ರಕರಣದ ಗಂಭೀರತೆಯನ್ನು ಗಮನಿಸಿದ ಪೊಲೀಸರು ಸೊಕೋ ತಂಡವನ್ನು ಸ್ಥಳಕ್ಕೆ ಕರೆಸಿ ವೈಜ್ಞಾನಿಕ ರೀತಿಯಲ್ಲಿ ಸಾಕ್ಷ್ಯ ಸಂಗ್ರಹ ಕಾರ್ಯ ನಡೆಸಿದರು. ಘಟನಾ ಸ್ಥಳವನ್ನು ಸಂಪೂರ್ಣವಾಗಿ ಪರಿಶೀಲಿಸಿ, ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಲಾಗಿದೆ.

ಮೃತನ ತಾಯಿ ಬಸವ್ವ ಕಬ್ಬೂರ ಅವರು ಸಾವಳಗಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ತಮ್ಮ ಮಗನನ್ನು ನೇಣು ಬಿಗಿದು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಮಗನೊಂದಿಗೆ ವಿವಾಹಿತ ಮಹಿಳೆಯೊಬ್ಬಳು ಅನೈತಿಕ ಸಂಬಂಧ ಹೊಂದಿದ್ದು, ಇದೇ ವಿಚಾರವನ್ನು ಕೇಂದ್ರವಾಗಿಸಿಕೊಂಡು ಸಂಚು ರೂಪಿಸಿ ಕೊಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಕಾತ್ರಾಳ ಗ್ರಾಮದ ಮಲ್ಲವ್ವ ನ್ಯಾಮಗೌಡ (ಎ1), ತೊದಲಬಾಗಿ ಗ್ರಾಮದ ಅಭಿಷೇಕ ತಕ್ಕೊಡ (ಎ2) ಹಾಗೂ ಮಲ್ಲಪ್ಪ ಕುಂಬಾರ (ಎ3) ವಿರುದ್ಧ ಕೊಲೆ ಆರೋಪ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಮೂವರನ್ನೂ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ಮಡ್ದಿ ಹಾಗೂ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ಮರಣದ ನಿಖರ ಕಾರಣವು ಮರಣೋತ್ತರ ಪರೀಕ್ಷೆಯ ವರದಿ ಹಾಗೂ ವೈಜ್ಞಾನಿಕ ತನಿಖೆಯ ನಂತರವೇ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಸ್ತುತ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಕುಟುಂಬಸ್ಥರ ಆರೋಪಗಳು, ಲಭ್ಯವಾಗಿರುವ ಸಾಕ್ಷ್ಯಗಳು ಹಾಗೂ ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣವು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ತನಿಖೆಯ ಫಲಿತಾಂಶದತ್ತ ಸಾರ್ವಜನಿಕರು ಕಾತರದಿಂದ ಎದುರು ನೋಡುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande