ಯರನಾಳ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಸ್ವಚ್ಛತೆ, ಆರೋಗ್ಯ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆ
ಭೇಟಿ


ವಿಜಯಪುರ, 02 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ

ಬಸವನ ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕ ಸೌಲಭ್ಯಗಳು ಹಾಗೂ ಆಡಳಿತಾತ್ಮಕ ಕಾರ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ, ಸಾರ್ವಜನಿಕರಿಗೆ ಲಭ್ಯವಾಗುತ್ತಿರುವ ಮೂಲಸೌಕರ್ಯಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

ಭೇಟಿಯ ಆರಂಭದಲ್ಲಿ ಗ್ರಾಮದ ಕೃಷಿ ಮಾರುಕಟ್ಟೆಗೆ ತೆರಳಿದ ಅವರು ಅಲ್ಲಿನ ಗೋಡೌನ್ಗಳು ಹಾಗೂ ವ್ಯಾಪಾರ ಮಳಿಗೆಗಳನ್ನು ವೀಕ್ಷಿಸಿ, ಮಾರುಕಟ್ಟೆ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ತಿಳಿಸಿದರು.

ಸಾರ್ವಜನಿಕರು ಹಾಗೂ ರೈತರಿಗೆ ಆರೋಗ್ಯಕರ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಸ ವಿಲೇವಾರಿ, ಸ್ವಚ್ಛತಾ ಕಾರ್ಯ ಹಾಗೂ ಮೂಲಭೂತ ಸೌಲಭ್ಯಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಗ್ರಾಮದಲ್ಲಿರುವ ಸಮುದಾಯ ಶೌಚಾಲಯಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ಅವರು, ಸಾರ್ವಜನಿಕರು ಶೌಚಾಲಯಗಳನ್ನು ಸಮರ್ಪಕವಾಗಿ ಬಳಸುವಂತೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಶೌಚಾಲಯಗಳ ನಿಯಮಿತ ಸ್ವಚ್ಛತೆ ಹಾಗೂ ನಿರ್ವಹಣೆಗೆ ವಿಶೇಷ ಕ್ರಮ ಕೈಗೊಂಡು ಗ್ರಾಮವನ್ನು ಸ್ವಚ್ಛ ಮತ್ತು ಆರೋಗ್ಯಕರವಾಗಿಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಪ್ರಕಾಶ ವಡ್ಡರ ಅವರು, ಮಕ್ಕಳಿಗೆ ಕಲ್ಪಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ಕಟ್ಟಡದ ಸ್ಥಿತಿ, ಮಕ್ಕಳ ಪೌಷ್ಟಿಕ ಆಹಾರ ವ್ಯವಸ್ಥೆ ಹಾಗೂ ಅಗತ್ಯ ದುರಸ್ತಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು. ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಸುರಕ್ಷತೆಗೆ ಅನುಕೂಲಕರ ವಾತಾವರಣ ನಿರ್ಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅನಂತರ ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟ, ಮೂಲಭೂತ ಸೌಲಭ್ಯಗಳು ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು. ಆರೋಗ್ಯ ಕೇಂದ್ರದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸಿ, ಗ್ರಾಮಸ್ಥರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಆಡಳಿತಾತ್ಮಕ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪಂಚಾಯಿತಿಯ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವ ಮೂಲಕ ಆದಾಯವನ್ನು ಬಲಪಡಿಸಬೇಕು ಎಂದು ಬಿಲ್ ಕಲೆಕ್ಟರ್ಗಳಿಗೆ ಸೂಚಿಸಿದರು. ಗ್ರಾಮ ಸ್ವಚ್ಛತೆ, ಕುಡಿಯುವ ನೀರು, ರಸ್ತೆ, ಬೀದಿ ದೀಪ ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳ ನಿರ್ವಹಣೆಗೆ ಹೆಚ್ಚಿನ ಗಮನಹರಿಸಿ ಗ್ರಾಮಸ್ಥರಿಗೆ ಉತ್ತಮ ಸೇವೆ ಒದಗಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಅನುಷ್ಠಾನದ ಕುರಿತೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಯೋಜನೆಯ ಕುರಿತು ಗ್ರಾಮಸ್ಥರಿಗೆ ವ್ಯಾಪಕ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಅರ್ಹ ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಹಾಗೂ ಎನ್ಎಂಆರ್ ಸೃಜನೆ ಪ್ರಕ್ರಿಯೆಯನ್ನು ತ್ವರಿತವಾಗಿ ಆರಂಭಿಸಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯಿತಿಗೆ ಲಭ್ಯವಿರುವ ಶುದ್ಧ ಕುಡಿಯುವ ನೀರಿನ ಘಟಕದ ಕಾರ್ಯವೈಖರಿ ಕುರಿತು ಮಾಹಿತಿ ಪಡೆದು, ಘಟಕದ ಸಮರ್ಪಕ ನಿರ್ವಹಣೆ ಮೂಲಕ ಗ್ರಾಮಸ್ಥರಿಗೆ ನಿರಂತರವಾಗಿ ಸುರಕ್ಷಿತ ಹಾಗೂ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಸಿಬ್ಬಂದಿಗೆ ಸೂಚಿಸಿದರು.

ಒಟ್ಟಾರೆ ಈ ಪರಿಶೀಲನಾ ಭೇಟಿ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಸೌಲಭ್ಯಗಳ ಸುಧಾರಣೆ, ಸ್ವಚ್ಛತೆ, ಆರೋಗ್ಯ, ಕುಡಿಯುವ ನೀರು, ತೆರಿಗೆ ವಸೂಲಾತಿ ಹಾಗೂ ಗ್ರಾಮೀಣ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡುವಂತೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande