
ಗದಗ, 02 ಜುಲೈ (ಹಿ.ಸ.):
ಆ್ಯಂಕರ್:
ಕಾಡಿನಲ್ಲಿ ಬೆಳೆಯುವ ಔಡಲ (ಕಾಡು ಬೀಜ) ಸೇವಿಸಿದ ಪರಿಣಾಮ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡ ಘಟನೆ ಗದಗ ತಾಲೂಕಿನ ಬೆಳಧಡಿ ತಾಂಡಾ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಹಾಗೂ ಭೇದಿಯಿಂದ ನರಳಲಾರಂಭಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಪಾಲಕರ ಆತಂಕ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ.
ನಿನ್ನೆ ಸಂಜೆ ಶಾಲೆ ಮುಗಿಸಿ ಮನೆಗೆ ಬಂದ ವಿದ್ಯಾರ್ಥಿಗಳು ಗ್ರಾಮದ ಸುತ್ತಮುತ್ತ ದೊರೆತ ಕಾಡು ಔಡಲ ಬೀಜಗಳನ್ನು ಸೇವಿಸಿದ್ದಾರೆ ಎನ್ನಲಾಗಿದೆ. ಕೆಲವೇ ಸಮಯದಲ್ಲಿ ಮಕ್ಕಳಿಗೆ ಹೊಟ್ಟೆ ನೋವು, ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಗ್ರಾಮಸ್ಥರು ಹಾಗೂ ಪಾಲಕರು ಅವರನ್ನು ತಕ್ಷಣ ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಿದರು.
ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ವಿದ್ಯಾರ್ಥಿಗಳಿಗೆ ತುರ್ತು ಚಿಕಿತ್ಸೆ ನೀಡಿದ್ದು, ಎಲ್ಲ ಮಕ್ಕಳನ್ನು ನಿಗಾದಲ್ಲಿ ಇರಿಸಲಾಗಿದೆ. ವೈದ್ಯರ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯಿಂದ ಬೆಳಧಡಿ ತಾಂಡಾ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಒಂದೇ ಗ್ರಾಮದ 25ಕ್ಕೂ ಹೆಚ್ಚು ಮಕ್ಕಳು ಏಕಕಾಲಕ್ಕೆ ಅಸ್ವಸ್ಥಗೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಪಾಲಕರು ಆತಂಕದಿಂದ ಆಸ್ಪತ್ರೆಗೆ ಧಾವಿಸಿದರು. ಮಕ್ಕಳ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಲಕರು, ಶಾಲಾ ಮಕ್ಕಳಿಗೆ ವಿಷಕಾರಿ ಕಾಡು ಬೀಜಗಳು ಹಾಗೂ ತಿನ್ನಬಾರದ ಸಸ್ಯಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಮಕ್ಕಳ ತಾಯಂದಿರಾದ ಶಿಲ್ಪಾ ಹಾಗೂ ರೇಣುಕಾ ಮಾತನಾಡಿ, ಮಕ್ಕಳು ಶಾಲೆಯಿಂದ ಮನೆಗೆ ಬಂದ ಬಳಿಕ ಏಕಾಏಕಿ ವಾಂತಿ, ಹೊಟ್ಟೆ ನೋವು ಹಾಗೂ ಭೇದಿಯಿಂದ ನರಳಲು ಆರಂಭಿಸಿದರು. ಕೂಡಲೇ ಆಸ್ಪತ್ರೆಗೆ ಕರೆತಂದಿದ್ದರಿಂದ ಸೂಕ್ತ ಚಿಕಿತ್ಸೆ ದೊರೆತು ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಘಟನೆ ಕುರಿತು ಮಾಹಿತಿ ಪಡೆದ ಸಂಬಂಧಿತ ಅಧಿಕಾರಿಗಳು ಆಸ್ಪತ್ರೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ಮಕ್ಕಳ ಆರೋಗ್ಯದ ಮೇಲೆ ವೈದ್ಯರು ನಿರಂತರ ನಿಗಾ ವಹಿಸಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದ್ದು, ವಿದ್ಯಾರ್ಥಿಗಳು ಯಾವ ರೀತಿಯ ಬೀಜ ಸೇವಿಸಿದ್ದರು ಹಾಗೂ ಘಟನೆಗೆ ಕಾರಣವಾದ ಸಂದರ್ಭಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP