
ಬಾಗಲಕೋಟೆ, 20 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯ ಆನದಿನ್ನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಕ್ಕ ಪಡೆ ತಂಡದ ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಸಮಗ್ರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಅಕ್ಕ ಪಡೆ ತಂಡದ ಸದಸ್ಯರು ವಿದ್ಯಾರ್ಥಿನಿಯರಿಗೆ ಅಕ್ಕ ಪಡೆಯ ಉದ್ದೇಶ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಕೈಗೊಂಡಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ತುರ್ತು ಸಂದರ್ಭಗಳಲ್ಲಿ ತಕ್ಷಣದ ಪೊಲೀಸ್ ನೆರವಿಗಾಗಿ 112, ಮಕ್ಕಳ ರಕ್ಷಣೆಗಾಗಿ 1098 ಮಕ್ಕಳ ಸಹಾಯವಾಣಿ, ಮಹಿಳೆಯರ ಸಹಾಯಕ್ಕಾಗಿ 181 ಮಹಿಳಾ ಸಹಾಯವಾಣಿ ಹಾಗೂ ಆನ್ಲೈನ್ ವಂಚನೆಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು 1930 ಸೈಬರ್ ಸಹಾಯವಾಣಿ ಸಂಖ್ಯೆಗಳ ಉಪಯೋಗ ಮತ್ತು ಅವುಗಳ ಮಹತ್ವವನ್ನು ವಿವರಿಸಿದರು.
ಇದೇ ವೇಳೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಲಾಯಿತು. ಯಾವುದೇ ರೀತಿಯ ದೌರ್ಜನ್ಯ, ಕಿರುಕುಳ ಅಥವಾ ಅಪರಾಧದ ಘಟನೆಗಳು ಕಂಡುಬಂದಲ್ಲಿ ಭಯಪಡದೆ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಯಿತು.
ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ, ಅಪರಿಚಿತ ವ್ಯಕ್ತಿಗಳೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳದಿರುವುದು, ಒಟಿಪಿ, ಬ್ಯಾಂಕ್ ವಿವರಗಳು ಮತ್ತು ಪಾಸ್ವರ್ಡ್ಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂಬ ಬಗ್ಗೆ ವಿಶೇಷವಾಗಿ ಅರಿವು ಮೂಡಿಸಲಾಯಿತು.
ರಸ್ತೆ ಸುರಕ್ಷತೆ ಕುರಿತು ಮಾತನಾಡಿದ ತಂಡದ ಸದಸ್ಯರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ರಸ್ತೆ ದಾಟುವಾಗ ಜೀಬ್ರಾ ಕ್ರಾಸಿಂಗ್ ಬಳಸುವುದು, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸುವುದು ಹಾಗೂ ವಾಹನ ಚಲಾಯಿಸುವಾಗ ಮೊಬೈಲ್ ಬಳಸದಿರುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ವಿವರಿಸಿದರು.
ಮಾದಕ ದ್ರವ್ಯಗಳ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, ಇಂತಹ ದುಶ್ಚಟಗಳಿಂದ ದೂರವಿದ್ದು ಉತ್ತಮ ಶಿಕ್ಷಣ, ಉತ್ತಮ ವ್ಯಕ್ತಿತ್ವ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಪ್ರಶ್ನೆಗಳನ್ನು ಕೇಳಿ ತಮ್ಮ ಅನುಮಾನಗಳಿಗೆ ಉತ್ತರ ಪಡೆದುಕೊಂಡರು. ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಪೊಲೀಸ್ ಇಲಾಖೆಯ ಈ ಜನಜಾಗೃತಿ ಕಾರ್ಯಕ್ರಮವನ್ನು ಶ್ಲಾಘಿಸಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಕಾನೂನು ಅರಿವು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande