
ಕೋಲಾರ, ೨೦ ಜುಲೈ (ಹಿ.ಸ)
ಆ್ಯಂಕರ್:
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರೀಕನೂ ಮತದಾನದ ಹಕ್ಕು ಹೊಂದುವುದು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಂತ ಪ್ರಮುಖ ಜವಾಬ್ದಾರಿಯಾಗಿದ್ದು, ಮತ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು, ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕರೆ ನೀಡಿದರು.
ಸೋಮವಾರ ತಾಲ್ಲೂಕಿನ ವೇಮಗಲ್ ಪಟ್ಟಣ ಪಂಚಾಯಿತಿ ವತಿಯಿಂದ ಇಲ್ಲಿನ ರಾಮಶೆಟ್ಟಿ ವೃತ್ತದಲ್ಲಿ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ೧೮ ವರ್ಷ ತುಂಬುತ್ತಿರುವ ಮತ್ತು ತುಂಬಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಹಾಗೂ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳುವ ಕುರಿತು ಕಾರ್ಯಕ್ರಮದಲ್ಲಿ ಮನವಿ ಮಾಡಿದ ಅವರು, ಇದರ ಸದುಪಯೋಗ ಪಡೆಯಿರಿ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - ೨೦೨೬ ರ ಸಂಬAಧ, ಬೂತ್ ಮಟ್ಟದ ಅಧಿಕಾರಿಗಳು ನೀಡಿರುವ ಗಣತಿ ಫಾರಂಗಳಲ್ಲಿ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ವಾಪಸ್ ನೀಡಬೇಕು. ಮತದಾರರ ಪಟ್ಟಿಯಲ್ಲಿ ಈಗಾಗಲೇ ನೊಂದಣಿಯಾದವರು, ತಮ್ಮ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು, ಅದನ್ನು ಸದ್ಬಳಿಕೆ ಮಾಡಿಕೊಳ್ಳಲು ಸಲಹೆ ನೀಡಿದರು.
ಯುವ ಸಮುದಾಯವು ದೇಶದ ಪ್ರಜಾಪ್ರಭುತ್ವದ ಬಲವರ್ಧನೆಗೆ ಹೇಗೆ ಕೊಡುಗೆ ನೀಡಬಹುದು ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಮತದಾನ ಎಂಬುದು ಕೇವಲ ಹಕ್ಕಲ್ಲ, ಅದೊಂದು ಜವಾಬ್ದಾರಿ.ಅದನ್ನು ಸರಿಯಾದ ರೀತಿಯಲ್ಲಿ ಬಳಸಬೇಕು. ಈ ವಿಶೇಷ ಪರಿಷ್ಕರಣೆಯ ಸದುಪಯೋಗವನ್ನು ಪಡೆದುಕೊಂಡು ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರನ್ನು ಖಚಿತಪಡಿಸಕೊಳ್ಳಬೇಕು. ಪಟ್ಟಣದ ಪ್ರತಿಯೊಬ್ಬರು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವುದು, ಹೆಸರು/ವಿಳಾಸ ತಿದ್ದುಪಡಿ ಹಾಗೂ ಆಧಾರ್ಜೋಡಣೆ ಮುಂತಾದ ಪ್ರಕ್ರಿಯೆಗಳ ಬಗ್ಗೆ ಸ್ಥಳದಲ್ಲೇ ಸವಿಸ್ತಾರವಾದ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಏಜಾಜ್ ಪಾಷಾ ಮಾತನಾಡಿ, ಪಟ್ಟಣದ ಪ್ರತಿಯೊಂದು ಮನೆಗೂ ಎಸ್ಐಆರ್ ನಮೂನೆಗಳು ತಲುಪಿಸಲಾಗುತ್ತಿದೆ. ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಶ್ ಮಾತನಾಡಿ, ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಸೂಕ್ತ ನಾಯಕರನ್ನು ಆಯ್ಕೆ ಮಾಡುವ ಶಕ್ತಿ ನಮಗಿರುವ ಮತದಾನದ ಹಕ್ಕಿನಲ್ಲಿದೆ .ಚಾಲನೆ ದೊರೆತ ಬಳಿಕ ಜಾಥಾವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ಸಾಗಿತು. ಈ ಜಾಥಾದ ಉದ್ದಕ್ಕೂ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅವರು ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಹೆಜ್ಜೆ ಹಾಕುತ್ತಾ ಸಾಗಿದ್ದು ವಿಶೇಷವಾಗಿತ್ತು.
ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅನುಷ.ಡಿ ಮುನಿರಾಜು, ವೇಮಗಲ್ ಪೊಲೀಸ್ ಠಾಣೆಯ ಸಬ್ ಇನ್ಸೆ÷್ಪಕ್ಟರ್ ಸುನಿತಾದೇವಿ,ಹಾಗೂ ಪಟ್ಟಣ ಪಂಚಾಯಿತಿ ಮತ್ತು ಯೋಜನಾ ಪ್ರಾಧಿಕಾರ ಸದಸ್ಯರು ಭಾಗಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್