ಕುರುಬ ಸಮಾಜಕ್ಕೆ ಎಸ್.ಟಿ. ಮೀಸಲಾತಿ ವಿಸ್ತರಣೆಗೆ ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿ; ಇಲ್ಲದಿದ್ದರೆ ಉಗ್ರ ಹೋರಾಟ: ಕಾಗಿನೆಲೆ ಶ್ರೀ ಎಚ್ಚರಿಕೆ
ಬಾಗಲಕೋಟೆ, 20 ಜುಲೈ (ಹಿ.ಸ.) ಆ್ಯಂಕರ್ : ರಾಜ್ಯದ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್.ಟಿ.) ಮೀಸಲಾತಿಯನ್ನು ರಾಜ್ಯಾದ್ಯಂತ ವಿಸ್ತರಿಸುವ ಕುರಿತು ಕೇಂದ್ರ ಸರ್ಕಾರ ಯಾವುದೇ ವಿಳಂಬ ಮಾಡಬಾರದು. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಎಸ್.ಟಿ. ಸೌಲಭ್ಯವನ್ನು ಇಡೀ ಕರ್ನಾಟಕದ ಕುರುಬ ಸಮುದಾಯಕ
ಹೊರಟ


ಬಾಗಲಕೋಟೆ, 20 ಜುಲೈ (ಹಿ.ಸ.)

ಆ್ಯಂಕರ್ : ರಾಜ್ಯದ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್.ಟಿ.) ಮೀಸಲಾತಿಯನ್ನು ರಾಜ್ಯಾದ್ಯಂತ ವಿಸ್ತರಿಸುವ ಕುರಿತು ಕೇಂದ್ರ ಸರ್ಕಾರ ಯಾವುದೇ ವಿಳಂಬ ಮಾಡಬಾರದು. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಎಸ್.ಟಿ. ಸೌಲಭ್ಯವನ್ನು ಇಡೀ ಕರ್ನಾಟಕದ ಕುರುಬ ಸಮುದಾಯಕ್ಕೂ ವಿಸ್ತರಿಸಬೇಕು. ಇಲ್ಲವಾದಲ್ಲಿ ಕನಕ ಗುರುಪೀಠದ ನೇತೃತ್ವದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬಾಗಲಕೋಟೆ ನಗರದ ನವನಗರದ ಕಲಾಭವನದಲ್ಲಿ ಜಿಲ್ಲಾ ಹಾಲುಮತ ನೌಕರರ ಸಂಘ (ರಿ.) ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ (ರಿ.) ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕುರುಬ ಸಮುದಾಯವು ಹೊಸದಾಗಿ ಮೀಸಲಾತಿ ಕೇಳುತ್ತಿಲ್ಲ. ಈಗಾಗಲೇ ಬೀದರ್, ಕಲಬುರಗಿ, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕುರುಬ ಸಮುದಾಯಕ್ಕೆ ಲಭ್ಯವಿರುವ ಎಸ್.ಟಿ. ಸೌಲಭ್ಯವನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬುದು ನಮ್ಮ ನ್ಯಾಯಸಮ್ಮತ ಬೇಡಿಕೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರದ ದಾಖಲೆಗಳಲ್ಲಿ ಇರುವ 'ಕೊಡಗು' ಎಂಬ ಭೌಗೋಳಿಕ ನಿರ್ಬಂಧವನ್ನು ತೆರವುಗೊಳಿಸಿದರೆ ರಾಜ್ಯದ ಎಲ್ಲಾ ಕುರುಬ ಸಮುದಾಯದ ಜನರಿಗೆ ಎಸ್.ಟಿ. ಮೀಸಲಾತಿಯ ಲಾಭ ದೊರೆಯಲಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತ್ವರಿತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಮಾಜದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಮೀಸಲಾತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಎಸ್.ಟಿ. ಮೀಸಲಾತಿ ದೊರೆತರೆ ಕುರುಬ ಸಮುದಾಯದ ಯುವಕರು ಐಎಎಸ್, ಐಪಿಎಸ್, ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಹಾಗೂ ಸರ್ಕಾರಿ ಸೇವೆಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆದು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ಸಾಧ್ಯವಾಗುತ್ತದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಈ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಜನಪ್ರತಿನಿಧಿಗಳ ಬೆಂಬಲ ದೊರೆತಿದೆ ಎಂದು ತಿಳಿಸಿದ ಅವರು, ಕುರುಬ ಸಮುದಾಯದ ಹಕ್ಕುಗಳಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸುವ ಅಗತ್ಯವಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಮೂಲಕವೇ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ ಸಾಧ್ಯ ಎಂದು ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿ, ಕಾಗಿನೆಲೆ ಶ್ರೀಗಳು ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನಿರಂತರವಾಗಿ ನೀಡುತ್ತಿರುವ ಮಾರ್ಗದರ್ಶನ ಹಾಗೂ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಶಿರೂರು ಕನಕ ಬ್ರಹ್ಮ ವಿದ್ಯಾಶ್ರಮದ ಚಿನ್ಮಯಾನಂದ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ, ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಯಶಸ್ಸಿನ ಶಿಖರ ತಲುಪಲು ಶಿಸ್ತು ಮತ್ತು ಪರಿಶ್ರಮವೇ ಪ್ರಮುಖ ಅಸ್ತ್ರಗಳಾಗಿವೆ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟೆ ಶಾಸಕ ಉಮೇಶ್ ಹೆಚ್. ಮೇಟಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕುವ ನಿಟ್ಟಿನಲ್ಲಿ ತಮ್ಮ ತಂದೆ ದಿವಂಗತ ಹೆಚ್.ವೈ. ಮೇಟಿ ಅವರು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದರು ಎಂದು ಸ್ಮರಿಸಿದರು. ನವನಗರದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಒದಗಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಅತ್ಯಂತ ಪ್ರಬಲ ಅಸ್ತ್ರವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಅವರಿಗೆ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡಲಾಗುತ್ತದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜೊತೆಗೆ ಸಮಾಜದ ಪ್ರಗತಿಗೂ ಸಹಕಾರಿಯಾಗುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ 600ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಪಿಎಸ್ಸಿ ಮಾಜಿ ಸದಸ್ಯ ಎಚ್.ಡಿ. ಪಾಟೀಲ, ಜಿಲ್ಲಾ ಹಾಲುಮತ ನೌಕರರ ಸಂಘದ ಗೌರವಾಧ್ಯಕ್ಷ ಎನ್.ಬಿ. ಗೊರವರ, ಜಿಲ್ಲಾಧ್ಯಕ್ಷ ಎಸ್.ಎಚ್. ಘಂಟಿ, ವಿವಿಧ ತಾಲೂಕುಗಳ ಪದಾಧಿಕಾರಿಗಳು, ಮುಖಂಡರು, ಶಿಕ್ಷಕರು, ಪೋಷಕರು ಹಾಗೂ ಸಾವಿರಾರು ಸಂಖ್ಯೆಯ ಕುರುಬ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande