
ಹಾಸನ, 20 ಜುಲೈ (ಹಿ.ಸ.):
ಆ್ಯಂಕರ್:
ಶನಿವಾರ ನಿಧನರಾಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ಅಂತ್ಯಕ್ರಿಯೆ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಈಗಾಗಲೇ ಅವರ ಪಾರ್ಥಿವ ಶರೀರವನ್ನು ಹೊಳೆನರಸೀಪುರ ಪಟ್ಟಣದ ಹೆಚ್.ಡಿ. ರೇವಣ್ಣ ಅವರ ನಿವಾಸಕ್ಕೆ ತರಲಾಗಿದ್ದು, ಕುಟುಂಬಸ್ಥರು, ಬಂಧು-ಬಳಗ, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಅಂತ್ಯಕ್ರಿಯೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಹಾಗೂ ಕುಟುಂಬಸ್ಥರು ಪೂರ್ಣಗೊಳಿಸಿದ್ದಾರೆ. ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿ ಬೃಹತ್ ಟೆಂಟ್ ನಿರ್ಮಿಸಲಾಗಿದ್ದು, ಸುಮಾರು 30 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಗಣ್ಯರು ಯಾವುದೇ ತೊಂದರೆ ಇಲ್ಲದೆ ಭಾಗವಹಿಸಲು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ.
ಮಧ್ಯಾಹ್ನ 2 ಗಂಟೆಯ ನಂತರ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿದ್ದು, ಬೆಂಗಳೂರಿನ ಜೆ.ಪಿ.ನಗರದ ಕನಕಗಿರಿ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ ಕಣ್ಣನ್ ಸ್ವಾಮಿ ಅವರ ನೇತೃತ್ವದಲ್ಲಿ ಅಂತಿಮ ಸಂಸ್ಕಾರದ ಪೂಜಾ ಕಾರ್ಯಗಳು ನಡೆಯಲಿವೆ. ಬಳಿಕ ಮಧ್ಯಾಹ್ನ 3 ಗಂಟೆಯ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಸಲ್ಲಿಸಿ, ಸಂಜೆ 4.30ರೊಳಗೆ ಅಂತ್ಯಕ್ರಿಯೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. .
ಚೆನ್ನಮ್ಮ ದೇವೇಗೌಡರು ದೀರ್ಘಕಾಲ ಹೊಳೆನರಸೀಪುರ ಭಾಗದಲ್ಲಿ ವಾಸವಿದ್ದು, ಹಳೆಕೋಟೆ, ಮುತ್ತಿಗೆ ಹಿರೀಹಳ್ಳಿ, ಹರದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಈ ಕಾರಣದಿಂದಲೇ ಕುಟುಂಬದ ಸದಸ್ಯರು ಚರ್ಚಿಸಿ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನ ಜಾಗವನ್ನು ಅಂತ್ಯಕ್ರಿಯೆಗೆ ಆಯ್ಕೆ ಮಾಡಿದ್ದಾರೆ. ಇದೇ ಸ್ಥಳದಲ್ಲಿ ಮುಂದಿನ ದಿನಗಳಲ್ಲಿ ಚೆನ್ನಮ್ಮ ದೇವೇಗೌಡರ ಸ್ಮಾರಕ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಅವರ ಅಳಿಯ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ ಲಾಲ್ ಖಟ್ಟರ್, ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.