

ಹಾಸನ, 20 ಜುಲೈ (ಹಿ.ಸ.)
ಆ್ಯಂಕರ್:
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸಮೀಪದ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅನಾರೋಗ್ಯದಿಂದ ನಿಧನರಾಗಿದ್ದ ಚೆನ್ನಮ್ಮ ಅವರ ಅಂತಿಮ ವಿಧಿವಿಧಾನಗಳು ಕುಟುಂಬದ ಧಾರ್ಮಿಕ ಸಂಪ್ರದಾಯಗಳಂತೆ ಜರುಗಿದವು.
ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಪರವಾಗಿ ಪುಷ್ಪನಮನ ಸಲ್ಲಿಸಿದರು. ಅವರೊಂದಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಪ್ರಲ್ಹಾದ ಜೋಶಿ ಮಾತನಾಡಿ, ಚೆನ್ನಮ್ಮ ಅವರು ಸರಳತೆ, ಸಜ್ಜನಿಕೆ ಮತ್ತು ಮಾತೃವಾತ್ಸಲ್ಯದ ಪ್ರತಿರೂಪವಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡರ ಸುದೀರ್ಘ ಸಾರ್ವಜನಿಕ ಹಾಗೂ ರಾಜಕೀಯ ಜೀವನದಲ್ಲಿ ಸದಾ ಬೆನ್ನೆಲುಬಾಗಿ ನಿಂತು ಕುಟುಂಬವನ್ನು ಸಮರ್ಥವಾಗಿ ಮುನ್ನಡೆಸಿದ ಆದರ್ಶ ಗೃಹಿಣಿಯಾಗಿದ್ದರು. ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಶಿವರಾಜ್ ಸಿಂಗ್ ಚೌಹಾಣ್ ಹಾಗೂ ವಿ. ಸೋಮಣ್ಣ,
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಕೆ.ಹೆಚ್. ಮುನಿಯಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ, ಡಾ. ಸಿ.ಎನ್. ಮಂಜುನಾಥ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಸಚಿವರು, ಶಾಸಕರು, ಸಂಸದರು ಹಾಗೂ ಗಣ್ಯರು ಪುಷ್ಪನಮನ ಸಲ್ಲಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ರಂಭಾಪುರಿ ಪೀಠದ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಅಂತಿಮ ನಮನ ಸಲ್ಲಿಸಿ ದೇವೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಗಣ್ಯರ ಪುಷ್ಪನಮನದ ಬಳಿಕ ರಾಜ್ಯ ಸರ್ಕಾರದ ವತಿಯಿಂದ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆ ಮೊಳಗಿಸಿ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ಬಳಿಕ ರಾಷ್ಟ್ರಧ್ವಜವನ್ನು ದೇವೇಗೌಡರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ನಂತರ ಹಿರಿಯ ಪುತ್ರ ಎಚ್.ಡಿ. ರಮೇಶ್ ಧಾರ್ಮಿಕ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಿದರು. ಗಂಗಾಜಲ ಸಿಂಪಡಿಸಿ ಶುದ್ಧೀಕರಣ ಮಾಡಿದ ಬಳಿಕ ಪಲ್ಲಕ್ಕಿಯಲ್ಲಿ ತರಲಾದ ಪಾರ್ಥಿವ ಶರೀರವನ್ನು ಸಮಾಧಿಗೆ ಇಳಿಸಲಾಯಿತು. ದೇವೇಗೌಡರು ಹಾಗೂ ಕುಟುಂಬದ ಸದಸ್ಯರು ಅಂತಿಮ ಪೂಜೆ ಸಲ್ಲಿಸಿದರು. ಅರ್ಚಕರ ವೇದಮಂತ್ರಗಳ ಪಠಣದ ನಡುವೆ ಪಲ್ಲಕ್ಕಿಯನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಾರ್ವಜನಿಕರು, ಜೆಡಿಎಸ್ ಕಾರ್ಯಕರ್ತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಗಣ್ಯರು ದೇವೇಗೌಡರ ಕುಟುಂಬಕ್ಕೆ ಸಾಂತ್ವನ ಸೂಚಿಸಿ, ಚೆನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII