
ಗದಗ, 20 ಜುಲೈ (ಹಿ.ಸ.)
ಆ್ಯಂಕರ್:- ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಹಮ್ಮಿಗಿ ಬ್ಯಾರೇಜಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರಿನ ಒಳಹರಿವು ದಾಖಲಾಗದ ಹಿನ್ನೆಲೆಯಲ್ಲಿ, ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಜನರು ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅಗತ್ಯಕ್ಕಾಗಿ ಮಾತ್ರ ಮೀಸಲಿಡಲಾಗಿದೆ. ಈ ಕಾರಣದಿಂದ ಹಮ್ಮಿಗಿ ಜಲಾಶಯದಡಿ ಬರುವ ಕಾಲುವೆಗಳಿಗೆ ನೀರು ಹರಿಸುವಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಗದಗ ಹಾಗೂ ವಿಜಯನಗರ ಜಿಲ್ಲೆಯ ರೈತರು ಮುಂಗಾರು ಬೆಳೆಗಳಿಗೆ ಜಲಾಶಯದ ನೀರನ್ನು ಅವಲಂಬಿಸದಂತೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಗದಗ ಮತ್ತು ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಸಿಂಗಟಾಲೂರು ಏತ ನೀರಾವರಿ ಯೋಜನೆ ಮೂಲಕ ಸಾವಿರಾರು ಎಕರೆ ಕೃಷಿ ಭೂಮಿಗೆ ಹರಿ ನೀರಾವರಿ ಹಾಗೂ ಸೂಕ್ಷ್ಮ ನೀರಾವರಿ ವ್ಯವಸ್ಥೆಯ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಈ ವರ್ಷ ಮುಂಗಾರು ಮಳೆ ಸಮರ್ಪಕವಾಗಿ ಆಗದ ಪರಿಣಾಮ ಹಮ್ಮಿಗಿ ಬ್ಯಾರೇಜಿಗೆ ಅತ್ಯಲ್ಪ ಪ್ರಮಾಣದಲ್ಲಿ ಮಾತ್ರ ನೀರು ಹರಿದು ಬರುತ್ತಿದೆ. ಇದರಿಂದ ಜಲಾಶಯದಲ್ಲಿನ ನೀರಿನ ಸಂಗ್ರಹ ಕುಸಿದಿದ್ದು, ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸುವ ಅನಿವಾರ್ಯತೆ ಎದುರಾಗಿದೆ.
ರಾಷ್ಟ್ರೀಯ ಜಲ ನೀತಿ ಹಾಗೂ ರಾಜ್ಯ ಜಲ ನೀತಿಯ ಪ್ರಕಾರ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ನಿಯಮ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಮುಂದಿನ ದಿನಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕಾಯ್ದಿರಿಸಿ ಬಳಸಲು ಸರ್ಕಾರ ನಿರ್ದೇಶನ ನೀಡಿದೆ.
ಪ್ರಸ್ತುತ ಹಮ್ಮಿಗಿ ಬ್ಯಾರೇಜಿನಲ್ಲಿ 1.953 ಟಿಎಂಸಿ ಪ್ರಮಾಣದ ನೀರು ಮಾತ್ರ ಬಳಕೆಗೆ ಲಭ್ಯವಿದ್ದು, ಈ ಸಂಪೂರ್ಣ ನೀರನ್ನು ಕುಡಿಯುವ ನೀರಿನ ಅಗತ್ಯಕ್ಕಾಗಿ ಮೀಸಲಿಡಲಾಗಿದೆ. ಪರಿಣಾಮವಾಗಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹಮ್ಮಿಗಿ ಜಲಾಶಯದಡಿ ಬರುವ ಕಾಲುವೆಗಳಿಗೆ ನೀರು ಹರಿಸುವಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದರಿಂದ ಗದಗ ಹಾಗೂ ವಿಜಯನಗರ ಜಿಲ್ಲೆಗಳ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರು ನೀರಾವರಿ ನೀರನ್ನು ನಿರೀಕ್ಷಿಸಿ ಬೆಳೆ ಬೆಳೆಯದಂತೆ ಎಚ್ಚರಿಕೆ ನೀಡಲಾಗಿದೆ. ರೈತರು ಮಳೆಯಾಧಾರಿತ ಕೃಷಿ ಪದ್ಧತಿಯನ್ನು ಅನುಸರಿಸುವುದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಹಾಗೂ ಲಭ್ಯವಿರುವ ನೀರಿನ ಸಂಪನ್ಮೂಲವನ್ನು ಮಿತವಾಗಿ ಬಳಸುವುದು ಸೂಕ್ತ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಜಲಾಶಯಕ್ಕೆ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ನೀರಿನ ಒಳಹರಿವು ಹೆಚ್ಚಾದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆ ಕಡಿಮೆ ಇರುವುದರಿಂದ ರೈತರು ತಮ್ಮ ಕೃಷಿ ಯೋಜನೆಯನ್ನು ಅದಕ್ಕೆ ಅನುಗುಣವಾಗಿ ರೂಪಿಸಿಕೊಳ್ಳಬೇಕು ಎಂದು ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಗದಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿರುವುದು, ಬರದ ಆತಂಕ ಹೆಚ್ಚಾಗಿರುವುದು ಹಾಗೂ ರೈತರು ಈಗಾಗಲೇ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಹಮ್ಮಿಗಿ ಜಲಾಶಯದಿಂದ ನೀರು ಹರಿಸುವಲ್ಲಿ ಉಂಟಾಗಿರುವ ಅನಿಶ್ಚಿತತೆ ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಹಿನ್ನೆಲೆಯಲ್ಲಿ ರೈತರು ಯಾವುದೇ ಗೊಂದಲಕ್ಕೆ ಒಳಗಾಗದೆ, ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಜಲಾಶಯದ ನೀರಿನ ಮಟ್ಟ, ಮಳೆಯ ಪ್ರಮಾಣ ಹಾಗೂ ಸರ್ಕಾರದ ಮುಂದಿನ ನಿರ್ಧಾರಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಪ್ರಕಟಿಸುವ ಮಾಹಿತಿಯನ್ನು ಗಮನಿಸಿ ಕೃಷಿ ಯೋಜನೆ ರೂಪಿಸಬೇಕು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP