
ಮಂಡ್ಯ, ಜುಲೈ ೨೦.(ಹಿ.ಸ.):
ಆ್ಯಂಕರ್:
ಹೊಸ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೆಸ್ಕಾಂ ಸಹಾಯಕ ಎಂಜಿನಿಯರ್ರನ್ನು ಮಂಡ್ಯ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.
ಹೊಸದಾಗಿ ನಿರ್ಮಿಸಿದ ಮನೆಗೆ ವಿದ್ಯುತ್ ಸಂಪರ್ಕಕ್ಕಾಗಿ ಸಾರ್ವಜನಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಅಧಿಕೃತ ಶುಲ್ಕದ ಹೊರತಾಗಿ ₹75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಾಗಿ ₹30 ಸಾವಿರ ನೀಡುವಂತೆ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ಒತ್ತಾಯಿಸಿದ್ದರು ಎನ್ನಲಾಗಿದೆ.
ಇದರಿಂದ ಬೇಸತ್ತ ಅರ್ಜಿದಾರರು ಮಂಡ್ಯ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ಬಲೆ ಬೀಸಿದ ಅಧಿಕಾರಿಗಳು, ದೂರುದಾರರಿಂದ ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಶ್ರೀನಿವಾಸ್ ಅವರನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದರು.
ಕಾರ್ಯಾಚರಣೆಯಲ್ಲಿ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕರು ಲಂಚಕ್ಕೆ ಬೇಡಿಕೆ ಎದುರಾದರೆ ಲೋಕಾಯುಕ್ತ ಅಥವಾ ಸಂಬಂಧಿತ ತನಿಖಾ ಸಂಸ್ಥೆಗಳಿಗೆ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII