
ಬಾಗಲಕೋಟೆ, 21 ಜುಲೈ (ಹಿ.ಸ.)
ಆ್ಯಂಕರ್ : ಉತ್ತರ ಕರ್ನಾಟಕದ ಪ್ರಮುಖ ಜೀವನಾಡಿಗಳಲ್ಲಿ ಒಂದಾದ ಬಾಗಲಕೋಟೆ ಜಿಲ್ಲೆಯಲ್ಲಿ ಹರಿದ ಘಟಪ್ರಭಾ ನದಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ನಿಧಾನಗತಿಯ ಏರಿಕೆ ಕಂಡುಬಂದಿದ್ದು, ರೈತರು ಹಾಗೂ ನದಿ ತೀರದ ಜನರಲ್ಲಿ ಆಶಾಭಾವನೆ ಮೂಡಿಸಿದೆ.
ಧೂಪದಾಳ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಮೂಲಕ ಘಟಪ್ರಭಾ ನದಿಗೆ ಒಟ್ಟು 2,380 ಕ್ಯುಸೆಕ್ ನೀರು ಹರಿದುಬರುತ್ತಿದೆ. ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ನದಿಯ ಒಳಹರಿವು ಹಂತಹಂತವಾಗಿ ಹೆಚ್ಚಳವಾಗುತ್ತಿದೆ ಎಂದು ಜಲಸಂಪನ್ಮೂಲ ಇಲಾಖೆಯ ಮೂಲಗಳು ತಿಳಿಸಿವೆ.
ಪ್ರಸ್ತುತ ನದಿಯ ಹರಿವಿನಲ್ಲಿ ಯಾವುದೇ ಆತಂಕಕಾರಿ ಪರಿಸ್ಥಿತಿ ಇಲ್ಲದಿದ್ದರೂ, ಮೇಲ್ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾದರೆ ಒಳಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ನದಿ ತೀರದ ಗ್ರಾಮಗಳ ನಿವಾಸಿಗಳು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಘಟಪ್ರಭಾ ನದಿಯ ನೀರಿನ ಪ್ರಮಾಣ ಹೆಚ್ಚಳದಿಂದ ನೀರಾವರಿ ಯೋಜನೆಗಳಿಗೆ ಅನುಕೂಲವಾಗುವ ನಿರೀಕ್ಷೆ ವ್ಯಕ್ತವಾಗಿದ್ದು, ಮುಂಬರುವ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ ಸುಧಾರಿಸುವ ಸಾಧ್ಯತೆ ಇದೆ. ಮಳೆ ಮುಂದುವರಿದರೆ ನದಿಯ ಒಳಹರಿವು ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ.
ಜಲಸಂಪನ್ಮೂಲ ಇಲಾಖೆ ನದಿಯ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯವಿದ್ದಲ್ಲಿ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಹಾಗೂ ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande