
ಬಾಗಲಕೋಟೆ, 21 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಗಜೇಂದ್ರಗಡದಲ್ಲಿ ಹೆಚ್. ಎಸ್. ಸೋಂಪೂರ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಸರ್ವಜನಾಂಗದ ಶಾಂತಿಯ ತೋಟ – ಜಾಗೃತಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಎಚ್. ಮೇಟಿ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸಂದರ್ಭದಲ್ಲಿ ಹೆಚ್. ಎಸ್. ಸೋಂಪೂರ ಅವರು ತಮ್ಮ ಪರವಾಗಿ ಕ್ಷೇತ್ರದಾದ್ಯಂತ ಹಗಲಿರುಳು ಶ್ರಮಿಸಿ, ಮನೆ ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸುವ ಮೂಲಕ ತಮ್ಮ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದನ್ನು ಸ್ಮರಿಸಿದರು. ಅವರ ಸಂಘಟನಾ ಸಾಮರ್ಥ್ಯ, ಜನರೊಂದಿಗೆ ಹೊಂದಿರುವ ಆತ್ಮೀಯ ಬಾಂಧವ್ಯ ಹಾಗೂ ನಿಸ್ವಾರ್ಥ ಸೇವಾ ಮನೋಭಾವ ಸದಾ ಸ್ಮರಣೀಯವಾಗಿದ್ದು, ಪಕ್ಷ ಹಾಗೂ ಸಮಾಜದ ಅಭಿವೃದ್ಧಿಗೆ ಅವರು ಸಲ್ಲಿಸಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಹೆಚ್. ಎಸ್. ಸೋಂಪೂರ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದು, ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಸಂದೇಶವನ್ನು ಹರಡುವ ಕೆಲಸ ಮಾಡುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹವನ್ನು ಹೆಚ್ಚಿಸುವುದರ ಜೊತೆಗೆ ಸಮಾಜಕ್ಕೂ ಮಾದರಿಯಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದ ಉಮೇಶ್ ಮೇಟಿ, ಹೆಚ್. ಎಸ್. ಸೋಂಪೂರ ಅವರಿಗೆ ಮತ್ತೊಮ್ಮೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿ, ಭಗವಂತನು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಮತ್ತು ಅವಕಾಶಗಳನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಗಣ್ಯರು, ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಹೆಚ್. ಎಸ್. ಸೋಂಪೂರ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande