
ವಿಜಯಪುರ, 21 ಜುಲೈ (ಹಿ.ಸ.)
ಆ್ಯಂಕರ್ : ರಾಷ್ಟ್ರೀಯ ಮಹಿಳಾ ಕೂಲೇಶನ್ (ನವದೆಹಲಿ) ಸಂಘಟನೆಯ ಭಾಗವಾಗಿ ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಮಲ್ಲಮ್ಮ ಯಾಳವಾರ ಮಾತನಾಡಿ, ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ದೊರೆಯಬೇಕಾದರೆ ಮಹಿಳಾ ಮೀಸಲಾತಿ ಕಾಯ್ದೆಯನ್ನು ಯಾವುದೇ ವಿಳಂಬವಿಲ್ಲದೆ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಮಹಿಳೆಯರು ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆದರೆ ರಾಜಕೀಯ ನಿರ್ಧಾರ ಕೈಗೊಳ್ಳುವ ವೇದಿಕೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಇನ್ನೂ ಸಮರ್ಪಕವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಶೀಘ್ರ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಮಹಿಳಾ ಮೀಸಲಾತಿ ಕುರಿತು ದೇಶವ್ಯಾಪಿ ಚರ್ಚೆಗಳು ಹಾಗೂ ಜಾರಿಗೆ ಸಂಬಂಧಿಸಿದ ಬೇಡಿಕೆಗಳು ಮುಂದುವರಿದಿವೆ.
ಮಹಿಳಾ ಸಬಲೀಕರಣ ಕೇವಲ ಘೋಷಣೆಯಾಗದೆ, ರಾಜಕೀಯ, ಸಾಮಾಜಿಕ ಹಾಗೂ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಸಮಾನ ಪಾಲುದಾರಿಕೆ ಸಿಗುವಂತೆ ನೀತಿಗಳನ್ನು ಜಾರಿಗೆ ತರಬೇಕಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಹಿಳೆಯರಿಗೆ ರಾಜಕೀಯ ನಾಯಕತ್ವದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಿದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ಮಹಿಳಾ ಮೀಸಲಾತಿಯನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande