
ವಿಜಯಪುರ, 21 ಜುಲೈ (ಹಿ.ಸ.)
ಆ್ಯಂಕರ್ : ರಾಜ್ಯ ಸರ್ಕಾರದ ಮಾದಕ ದ್ರವ್ಯಗಳ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ವಿಜಯಪುರ ನಗರದ ಜಲನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರೀ ಜಗಜ್ಯೋತಿ ಬಸವೇಶ್ವರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟರು.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಆಪರೇಷನ್ ರೈಸ್ ಹಾಗೂ ಬೇಡ ಬ್ರೋ ಅಭಿಯಾನದ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ, ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು, ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಜಾಲಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಯಾವುದೇ ಆಮಿಷಗಳಿಗೆ ಒಳಗಾಗದೆ ತಮ್ಮ ಶಿಕ್ಷಣ ಹಾಗೂ ಭವಿಷ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಅಪರಿಚಿತ ವ್ಯಕ್ತಿಗಳ ಸಂಪರ್ಕ, ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ತಕ್ಷಣವೇ ಪೊಲೀಸ್ ಇಲಾಖೆಗೆ ತಿಳಿಸಬೇಕು ಎಂದು ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದಿಂದ ಆರೋಗ್ಯದ ಮೇಲೆ ಉಂಟಾಗುವ ಹಾನಿ, ಕುಟುಂಬ ಮತ್ತು ಸಮಾಜದ ಮೇಲೆ ಬೀರುವ ಪರಿಣಾಮ, ಕಾನೂನು ಪ್ರಕಾರ ವಿಧಿಸಲಾಗುವ ಶಿಕ್ಷೆಗಳು ಹಾಗೂ ವ್ಯಸನಮುಕ್ತ ಜೀವನದ ಮಹತ್ವವನ್ನು ಮನವರಿಕೆ ಮಾಡಿಕೊಡಲಾಯಿತು. ಜೊತೆಗೆ, ಉತ್ತಮ ಸ್ನೇಹ ಬಳಗ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಶಿಕ್ಷಣದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಜಲನಗರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವಿರುದ್ಧ ಜಾಗೃತರಾಗಿ ಸಮಾಜದಲ್ಲಿಯೂ ಅರಿವು ಮೂಡಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಈ ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ಬಗ್ಗೆ ಎಚ್ಚರಿಕೆ ಮೂಡಿಸುವುದರ ಜೊತೆಗೆ, ಸುರಕ್ಷಿತ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಗಳು ಕೈಜೋಡಿಸಿರುವ ಉತ್ತಮ ಪ್ರಯತ್ನವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande