
ವಿಜಯಪುರ, 21 ಜುಲೈ (ಹಿ.ಸ.)
ಆ್ಯಂಕರ್ : ವಿದ್ಯಾರ್ಥಿ ಯುವಜನ ಧ್ವನಿ, ಪರಿಸರವಾದಿ ಹಾಗೂ ಸಮಾಜ ವಿಜ್ಞಾನಿ ಸೊನಮ್ ವಾಂಗ್ಚೂಕ್ ಅವರು ನೀಟ್ ಪರೀಕ್ಷೆಯಲ್ಲಿನ ಅಕ್ರಮ ಹಾಗೂ ಹಗರಣದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ವಿಜಯಪುರ ನಗರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಇತ್ತೀಚಿನ ದಿನಗಳಲ್ಲಿ ವಾಂಗ್ಚೂಕ್ ಅವರ ಹೋರಾಟಕ್ಕೆ ದೇಶದ ವಿವಿಧ ಭಾಗಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.
ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಅಕ್ರಮ ನಡೆಯಬಾರದು. ಪ್ರಾಮಾಣಿಕವಾಗಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ನೀಟ್ ಹಗರಣದಿಂದ ವಿದ್ಯಾರ್ಥಿಗಳಲ್ಲಿ ಆತಂಕ ಹಾಗೂ ನಿರಾಸೆ ಉಂಟಾಗಿದೆ. ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸ ಉಳಿಯಬೇಕಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಸೊನಮ್ ವಾಂಗ್ಚೂಕ್ ಅವರು ವಿದ್ಯಾರ್ಥಿಗಳ ಪರವಾಗಿ ನಡೆಸುತ್ತಿರುವ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇವೆ, ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚಾರ ಮುಕ್ತ ಪರೀಕ್ಷಾ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಶಾಂತಿಯುತವಾಗಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿ ನ್ಯಾಯಯುತ ಶಿಕ್ಷಣ ವ್ಯವಸ್ಥೆಗೆ ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande