
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಎದರು ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಕ್ರಮವನ್ನು ಖಂಡಿಸಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರು ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಆರ್. ಅಶೋಕ್, ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಕಾಂಗ್ರೆಸ್ ರಾಜಕೀಯದಲ್ಲಿ ಅಪಾಯಕಾರಿ ಹಾಗೂ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಪರಂಪರೆಯನ್ನು ಆರಂಭಿಸಿದೆ ಎಂದು ಆರೋಪಿಸಿದರು.
ರಾಷ್ಟ್ರದ ಭದ್ರತೆ, ಸಂವಿಧಾನದ ಗೌರವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ವಿಷಯದಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.
ದೇಶದ ಹಿತಕ್ಕಿಂತ ರಾಜಕೀಯವೇ ಕಾಂಗ್ರೆಸ್‌ಗೆ ಮುಖ್ಯವಾಗಿದೆ. ಇಂತಹ ರಾಷ್ಟ್ರವಿರೋಧಿ ರಾಜಕಾರಣವನ್ನು ಜನತೆ ಎಂದಿಗೂ ಒಪ್ಪುವುದಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಎಸ್.ಆರ್. ವಿಶ್ವನಾಥ್, ಬಿ.ಪಿ. ಹರೀಶ್, ಸಿ.ಕೆ. ರಾಮಮೂರ್ತಿ, ಹರೀಶ್ ಪೂಂಜ, ಜನಾರ್ದನ ರೆಡ್ಡಿ, ಚನ್ನಬಸಪ್ಪ, ಧೀರಜ್ ಮುನಿರಾಜು, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.