
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ಹಾಗೂ ಯುವಕರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂಬ ವರದಿಗಳು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಒಂದು ಕಾಲದಲ್ಲಿ ತಂತ್ರಜ್ಞಾನ, ಉದ್ಯಾನವನಗಳು ಹಾಗೂ ಅಭಿವೃದ್ಧಿಗೆ ಹೆಸರಾಗಿದ್ದ ಬೆಂಗಳೂರಿನಲ್ಲಿ ಇಂದು ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನಡೆಯುತ್ತಿದೆ ಎನ್ನುವುದು ರಾಜ್ಯದ ಭದ್ರತೆಯ ದೃಷ್ಟಿಯಿಂದ ಕಳವಳಕಾರಿ ಸಂಗತಿ ಎಂದು ಹೇಳಿದ್ದಾರೆ.
ಐಸಿಸ್ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯಲು ಮತ್ತು ನೇಮಕಾತಿ ನಡೆಸಲು ರಾಜ್ಯದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಚಟುವಟಿಕೆಗಳನ್ನು ತಡೆಯಲು ಗೃಹ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಗೃಹ ಸಚಿವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಪ್ರತಿಕ್ರಿಯಿಸುವುದಲ್ಲದೆ, ಆರ್‌ಎಸ್‌ಎಸ್ ಕುರಿತು ಹೇಳಿಕೆ ನೀಡುವುದರಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಸಿ.ಟಿ. ರವಿ ಟೀಕಿಸಿದ್ದಾರೆ.
ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾದ ಬೆಂಗಳೂರಿನಲ್ಲಿ ಭಯೋತ್ಪಾದನೆಯ ಬೇರು ಬಿಡುತ್ತಿರುವ ಲಕ್ಷಣಗಳು ಕಂಡುಬಂದರೆ ಸರ್ಕಾರ ಯಾವುದೇ ರಾಜಕೀಯವಿಲ್ಲದೆ ಅತ್ಯಂತ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಬೆಂಗಳೂರನ್ನು ಭಯೋತ್ಪಾದನಾ ಚಟುವಟಿಕೆಗಳ ನೆಲೆಯಾಗಲು ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.
ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ತಾಳಬಾರದು. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಆಡಳಿತ ಮತ್ತು ಅದರ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಸಿ.ಟಿ. ರವಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.