
ಚಿಕ್ಕಬಳ್ಳಾಪುರ, 22 ಜುಲೈ (ಹಿ.ಸ.):
ಆ್ಯಂಕರ್:ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕಂದಾಯ ಇಲಾಖೆಯ ವಿವಿಧ ವಿಷಯಗಳ ಕುರಿತು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ರೈತರ ಹಿತಾಸಕ್ತಿ, ಬೆಳೆ ವಿಮೆ, ಮೇವಿನ ಸಂಗ್ರಹ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಮೊದಲ ಆದ್ಯತೆ ನೀಡುವಂತೆ ಅವರು ನಿರ್ದೇಶಿಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಬೆಳೆ ವಿಮೆ ರೈತರಿಗೆ ವರದಾನವಾಗಿದ್ದು, ಬೆಳೆ ನಷ್ಟವಾದ ಸಂದರ್ಭದಲ್ಲಿ ಆರ್ಥಿಕ ನೆರವಾಗುತ್ತದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 80 ಸಾವಿರ ರೈತರನ್ನು ಬೆಳೆ ವಿಮೆಗೆ ನೋಂದಾಯಿಸುವ ಗುರಿ ನೀಡಲಾಗಿದ್ದರೂ, ಈವರೆಗೆ ಕೇವಲ 24 ಸಾವಿರ ಮಂದಿ ಮಾತ್ರ ನೋಂದಾಯಿಸಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.
ರೈತರಿಗೆ ಸಹಾಯ ಮಾಡುವ ಅವಕಾಶ ಇರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವರು ಸಂಕಷ್ಟ ಅನುಭವಿಸಬಾರದು. ಅನಗತ್ಯ ಕಾರಣಗಳನ್ನು ಹೇಳದೆ ಬೆಳೆ ವಿಮೆ ನೋಂದಣಿ ಗುರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ನಷ್ಟ ಅನುಭವಿಸಿದ ರೈತರಿಗೆ ವಿಮೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಮೇವಿನ ಪರಿಸ್ಥಿತಿ ಕುರಿತು ಮಾಹಿತಿ ಪಡೆದ ಡಿಸಿಎಂ, ಜಿಲ್ಲೆಯಲ್ಲಿ 1.86 ಲಕ್ಷ ಜಾನುವಾರುಗಳು ಹಾಗೂ 10 ಲಕ್ಷ ಕುರಿ-ಮೇಕೆಗಳಿದ್ದು, 3 ಲಕ್ಷ ಟನ್ ಮೇವು ಸಂಗ್ರಹವಿದೆ ಎಂಬ ಮಾಹಿತಿಯ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಮೇವಿನ ಸಂಗ್ರಹದ ಮಾಹಿತಿ ಯಾವ ಆಧಾರದ ಮೇಲೆ ನೀಡಿದ್ದೀರಿ? ರೈತರ ಬಳಿ ಮೇವು ಲಭ್ಯವಿರುವುದನ್ನು ಖಚಿತಪಡಿಸಿಕೊಂಡಿದ್ದೀರಾ? ಎಂದು ಪ್ರಶ್ನಿಸಿದ ಅವರು, ಮುಂದಿನ ಬೇಸಿಗೆಯಲ್ಲಿ ಯಾವುದೇ ರೀತಿಯ ಮೇವಿನ ಕೊರತೆ ಉಂಟಾಗದಂತೆ ಈಗಿನಿಂದಲೇ ಯೋಜಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನೀರಿನ ಲಭ್ಯತೆ ಇರುವ ರೈತರಿಗೆ ಮೇವಿನ ಬೆಳೆಗಳ ಬೀಜ ವಿತರಿಸಿ, ಮೇವು ಬೆಳೆಯಲು ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದ್ದು, ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್ ತಂಡಗಳು ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ನಿರಂತರ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.