
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:ನೀಟ್ ಪರೀಕ್ಷೆ ವಿಚಾರವನ್ನು ನೆಪವಾಗಿಸಿಕೊಂಡು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ರಾಜಕೀಯ ಮಾಡುತ್ತಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಹಿಂದೆ ನಡೆದ ಘಟನೆಗಳಲ್ಲೂ ಕಾಂಗ್ರೆಸ್ ಇದೇ ರೀತಿಯ ಹೋರಾಟ ನಡೆಸಬೇಕಾಗಿತ್ತು ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತವಾಗಿವೆ. ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ವಿದ್ಯಾರ್ಥಿಗಳು ಮೃತಪಟ್ಟಾಗ ಕಾಂಗ್ರೆಸ್ ನಾಯಕರು ಇದೇ ರೀತಿಯ ಕಾಳಜಿ ತೋರಲಿಲ್ಲ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿಯೂ ರಾಹುಲ್ ಗಾಂಧಿ ಧ್ವನಿ ಎತ್ತಿರಲಿಲ್ಲ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡುವ ಯಾವುದೇ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ. ಪ್ರಧಾನಿಯವರ ನಿವಾಸದ ಮುಂದೆ ಪ್ರತಿಭಟನೆ ನಡೆಸುವುದು ಉತ್ತಮ ಪ್ರಜಾಪ್ರಭುತ್ವದ ಸಂಪ್ರದಾಯವಲ್ಲ ಎಂದು ಅಶೋಕ್ ಹೇಳಿದರು.
ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮೋದಿ ಸರ್ಕಾರ ಮಹತ್ವದ ಸಾಧನೆ ಮಾಡಿದೆ ಎಂದು ಹೇಳಿದ ಅವರು, ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು 51 ಸಾವಿರದಿಂದ 1.36 ಲಕ್ಷಕ್ಕೆ ಹಾಗೂ ಸ್ನಾತಕೋತ್ತರ ವೈದ್ಯಕೀಯ (ಪಿಜಿ) ಸೀಟುಗಳನ್ನು 31 ಸಾವಿರದಿಂದ 1.17 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಅಮೆರಿಕದ ಹಣದ ಬೆಂಬಲದಲ್ಲಿ ಕೆಲವು ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ ಎಂದು ಆರೋಪಿಸಿದ ಅಶೋಕ್, ರಾಹುಲ್ ಗಾಂಧಿ ಲೋಕಸಭೆಯಲ್ಲಿ ಚರ್ಚೆ ನಡೆಸುವ ಬದಲು ಬೀದಿಗಿಳಿದು ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಕುರಿತು ತಾವು ವಿಧಾನಸಭೆಯಲ್ಲಿ ಹಲವು ಬಾರಿ ಪ್ರಸ್ತಾಪಿಸಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ರಾಜ್ಯ ಸರ್ಕಾರ ಯುವಕರ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.