
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಮತ್ತು ಹೊಸದುರ್ಗ ಶಾಖಾ ಮಠದ ವತಿಯಿಂದ ಬೆಂಗಳೂರಿನ ವಿಜಯನಗರದಲ್ಲಿ ಆಯೋಜಿಸಲಾಗಿದ್ದ 'ಪ್ರತಿಭಾ ಪುರಸ್ಕಾರ–2026' ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.
ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ 'ಕನಕ ಚೇತನ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಇದರೊಂದಿಗೆ ಶೈಕ್ಷಣಿಕ ರಂಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಯುವ ಜನತೆ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಈ ವೇಳೆ ಕಿವಿಮಾತು ಹೇಳಿದರು.
ಕನಕ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಈ ಕಾರ್ಯಕ್ರಮ ನಡೆಯಿತು.
ಈ ಸಮಾರಂಭದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ನಾಗಲಕ್ಷ್ಮಿ ಚೌಧರಿ, ವಿಧಾನ ಪರಿಷತ್ ಸದಸ್ಯರಾದ ಬಿ.ಎಸ್. ಶಿವಣ್ಣ, ಶಾಸಕರಾದ ಡಿ. ರವಿಶಂಕರ್, ಹಾಗೂ ಮಾಜಿ ಸಭಾಪತಿಗಳಾದ ರಘುನಾಥ್ ರಾವ್ ಮಲ್ಕಾಪುರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII