
ಬಾಗಲಕೋಟೆ, 23 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಗುರುವಾರ ಬಾಗಲಕೋಟೆಯ ನವನಗರ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ, ಸಾರ್ವಜನಿಕ ಸೇವೆಗಳು ಹಾಗೂ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಪರಿಶೀಲನೆ ವೇಳೆ ಬಸ್ ನಿಲ್ದಾಣದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸ್ವಚ್ಛತೆ, ಆಹಾರ ಸುರಕ್ಷತೆ, ಬಸ್ ಸಂಚಾರ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ದೊರೆಯುತ್ತಿರುವ ಸೇವೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪ ಲೋಕಾಯುಕ್ತರ ಎದುರು ತಮ್ಮ ಅಳಲು ತೋಡಿಕೊಂಡರು. ಸಮಯಕ್ಕೆ ಸರಿಯಾಗಿ ಬಸ್ಗಳು ಬಾರದ ಕಾರಣ ಪ್ರತಿದಿನ ಕಾಲೇಜು ಹಾಗೂ ಶಾಲೆಗಳಿಗೆ ತಡವಾಗಿ ತಲುಪಬೇಕಾಗುತ್ತಿದೆ. ಪರೀಕ್ಷೆ ಹಾಗೂ ತರಗತಿಗಳಿಗೆ ಹಾಜರಾಗುವುದಕ್ಕೂ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು.
ವಿದ್ಯಾರ್ಥಿಗಳ ಅಹವಾಲನ್ನು ಗಂಭೀರವಾಗಿ ಆಲಿಸಿದ ಉಪ ಲೋಕಾಯುಕ್ತರು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನೆ ವೇಳೆ ಬಸ್ ನಿಲ್ದಾಣದಲ್ಲಿನ ಕೆಲ ಅಂಗಡಿಗಳಲ್ಲಿ ಅವಧಿ ಮೀರಿದ ಜ್ಯೂಸ್ ಬಾಟಲಿಗಳನ್ನು ಮಾರಾಟಕ್ಕೆ ಇಟ್ಟಿರುವುದು ಹಾಗೂ ಕೆಲ ಹೋಟೆಲ್ಗಳಲ್ಲಿ ತಿಂಡಿ ಪದಾರ್ಥಗಳನ್ನು ತೆರೆದ ಸ್ಥಿತಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿತು. ಇದು ಸಾರ್ವಜನಿಕರ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಆಹಾರ ಸುರಕ್ಷತಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇದರ ಜೊತೆಗೆ ಬಸ್ ಸಂಚಾರದ ಅಸಮರ್ಪಕ ವ್ಯವಸ್ಥೆ, ಪ್ರಯಾಣಿಕರಿಗೆ ಸಮರ್ಪಕ ಮಾಹಿತಿ ಕೊರತೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಸೇರಿದಂತೆ ಹಲವು ಲೋಪಗಳನ್ನು ಗಮನಿಸಿದ ಉಪ ಲೋಕಾಯುಕ್ತರು, ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಸಾರ್ವಜನಿಕ ಸೇವೆಗಳಲ್ಲಿ ನಿರ್ಲಕ್ಷ್ಯ, ಆಹಾರ ಸುರಕ್ಷತೆ ಉಲ್ಲಂಘನೆ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನಾನುಕೂಲವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳನ್ನು ಸುಧಾರಿಸಿ, ಸಮಯಕ್ಕೆ ಸರಿಯಾಗಿ ಬಸ್ ಸೇವೆ ಕಲ್ಪಿಸುವುದು ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲು ಸಂಬಂಧಿಸಿದ ಇಲಾಖೆಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಪರಿಶೀಲನೆ ವೇಳೆ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು, ಆಹಾರ ಸುರಕ್ಷತಾ ಇಲಾಖೆ ಮತ್ತು ಇತರೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಉಪ ಲೋಕಾಯುಕ್ತರ ಈ ದಿಢೀರ್ ಪರಿಶೀಲನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಅಧಿಕಾರಿಗಳಲ್ಲಿ ಚಟುವಟಿಕೆ ಹೆಚ್ಚಾಗಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗುವ ನಿರೀಕ್ಷೆ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande