
ಮೈಸೂರು, 23 ಜುಲೈ (ಹಿ.ಸ.):
ಆ್ಯಂಕರ್:
ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷಾ ವ್ಯವಸ್ಥೆ ಹಾಗೂ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಕೆಲ ಹಂತಗಳಲ್ಲಿ ಲೋಪಗಳು ನಡೆದಿರಬಹುದು. ಆದರೆ ಅದನ್ನು ಕೇಂದ್ರ ಸರ್ಕಾರದ ವೈಫಲ್ಯ ಎಂದು ಬಿಂಬಿಸುವುದು ಸರಿಯಲ್ಲ ಎಂದು ಹೇಳಿದರು.
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ವೈದ್ಯಕೀಯ ಸೀಟುಗಳ ಸಂಖ್ಯೆಯೂ ಹೆಚ್ಚಾಗಿದೆ. ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಟೀಕಿಸುವ ಮೊದಲು ತಮ್ಮ ಆಡಳಿತಾವಧಿಯಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ನೆನಪಿಸಿಕೊಳ್ಳಬೇಕು. 2016ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಹಲವು ಬಾರಿ ಸೋರಿಕೆಯಾಗಿತ್ತು ಎಂದು ತಿರುಗೇಟು ನೀಡಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಂಸತ್ತಿನಲ್ಲಿ ಚರ್ಚೆಗೆ ಅವಕಾಶವಿದ್ದರೂ ಅದನ್ನು ಬಿಟ್ಟು ಹೊರಗೆ ಪ್ರತಿಭಟನೆ ನಡೆಸುವುದು ರಾಜಕೀಯ ಉದ್ದೇಶದಿಂದ ಎಂದು ಆರೋಪಿಸಿದರು.
ಇದೇ ವೇಳೆ ಬಿಜೆಪಿ ನಾಯಕರ ಮೇಲೆ ನಡೆದ ಮೊಟ್ಟೆ ದಾಳಿ ಹಾಗೂ ಹಲ್ಲೆ ಪ್ರಯತ್ನಗಳನ್ನು ಖಂಡಿಸಿದ ಪ್ರತಾಪ್ ಸಿಂಹ, ಭಿನ್ನಾಭಿಪ್ರಾಯಗಳನ್ನು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ವ್ಯಕ್ತಪಡಿಸಬೇಕು. ಹಿಂಸಾತ್ಮಕ ಘಟನೆಗಳು ಮತ್ತು ಬೀದಿ ಸಂಘರ್ಷಗಳು ಯಾವುದೇ ಕಾರಣಕ್ಕೂ ಪ್ರಜಾಪ್ರಭುತ್ವಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII