
ಬೆಂಗಳೂರು, 23 ಜುಲೈ (ಹಿ.ಸ.):
ಆ್ಯಂಕರ್:
ದೇಶ ವಿರೋಧಿ ಚಟುವಟಿಕೆಗಳಿಗೆ ಹಾಗೂ ಯುವಕರ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಪಿತೂರಿಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹಿರಿಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ. ನೀಟ್ ಪರೀಕ್ಷೆ ವಿಚಾರದಲ್ಲಿ ಯುವಕರ ಹೆಸರನ್ನು ಬಳಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ವಿಪಕ್ಷಗಳ ನಡವಳಿಕೆಯನ್ನು ಖಂಡಿಸಿದರು. ನೀಟ್ ಪರೀಕ್ಷೆಯಲ್ಲಿ ಅಕ್ರಮ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ವಿಚಾರವನ್ನು ಪ್ರಸ್ತಾಪಿಸಿದ ಅವರು, ಈ ಹಿಂದೆ ಐಪಿಎಲ್ ಮ್ಯಾಚ್ ಸಂದರ್ಭದಲ್ಲಿ ಅಮಾಯಕ 11 ಯುವಕರು ಬಲಿಯಾದಾಗ ತನಿಖೆಯನ್ನು ಮುಚ್ಚಿಹಾಕಿದವರು ಯಾರು ಎಂದು ಪ್ರಶ್ನಿಸಿದರು. ಅಂದು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಚ್ಚಿಹಾಕಿದ ಕಾಂಗ್ರೆಸ್ಗೆ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಯುವಕರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರಿಗೆ ಯಾವ ದೇಶದಿಂದ ಹಣ ಬರುತ್ತಿದೆ ಮತ್ತು ಯಾರು ಬೆಂಬಲಿಸುತ್ತಿದ್ದಾರೆ ಎಂಬ ಸಂಪೂರ್ಣ ಸತ್ಯಾಸತ್ಯತೆ ಮುಂದಿನ ದಿನಗಳಲ್ಲಿ ಹೊರಬರಲಿದೆ. ದೇಶದ್ರೋಹಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವವರಿಗೆ ಜನರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII