ಕೆ ಪಿ ಎಸ್ ಸಿ ಕರ್ಮಕಾಂಡ ಬಗ್ಗೆ ರಾಹುಲ್ ಗಾಂಧಿ ಮೌನ ಏಕೆ?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನೆ
ನವದೆಹಲಿ, 23 ಜುಲೈ (ಹಿ.ಸ.): ಆ್ಯಂಕರ್: ನೀಟ್ ಪರೀಕ್ಷೆ ವಿಚಾರದಲ್ಲಿ ಧ್ವನಿ ಎತ್ತುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ನಡೆದಿರುವ ಕೆಪಿಎಸ್ಸಿ ಕರ್ಮಕಾಂಡದ ಕುರಿತು ಏಕೆ ಮೌನ ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ
Joshi file photo


ನವದೆಹಲಿ, 23 ಜುಲೈ (ಹಿ.ಸ.):

ಆ್ಯಂಕರ್:

ನೀಟ್ ಪರೀಕ್ಷೆ ವಿಚಾರದಲ್ಲಿ ಧ್ವನಿ ಎತ್ತುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ನಡೆದಿರುವ ಕೆಪಿಎಸ್ಸಿ ಕರ್ಮಕಾಂಡದ ಕುರಿತು ಏಕೆ ಮೌನ ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

ಗುರುವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ವಿಪಕ್ಷಗಳು ರಾಜಕೀಯ ವಿಷಯವನ್ನಾಗಿ ಮಾಡುತ್ತಿವೆ ಎಂದು ಆರೋಪಿಸಿದರು. ನೀಟ್ ವಿವಾದದ ಕುರಿತು ಸಂಸತ್ತಿನಲ್ಲಿ ಮುಕ್ತ ಹಾಗೂ ಸತ್ಯಾಧಾರಿತ ಚರ್ಚೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧವಿದ್ದು, ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷ ನಾಯಕರು ಚರ್ಚೆಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಒಬ್ಬರ ಅಹಂಕಾರದಿಂದ ಚರ್ಚೆ ನಡೆಯುತ್ತಿಲ್ಲ ಎಂದು ಅವರು ಟೀಕಿಸಿದರು.

ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ರಾಜಕೀಯವನ್ನು ಬದಿಗೊತ್ತಿ ಎಲ್ಲ ಪಕ್ಷಗಳೂ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಜೋಶಿ ಕರೆ ನೀಡಿದರು.

ಕರ್ನಾಟಕದಲ್ಲಿ ಸುಮಾರು 2.7 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಕೆಪಿಎಸ್‌ಸಿ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಪರೀಕ್ಷಾರ್ಥಿಗಳ ಪ್ರತಿಭಟನೆ ವೇಳೆ ಲಾಠಿಚಾರ್ಜ್ ನಡೆದಿದ್ದರೂ, ರಾಹುಲ್ ಗಾಂಧಿ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಲಿಲ್ಲ ಹಾಗೂ ಅವರ ಹೋರಾಟಕ್ಕೆ ಬೆಂಬಲ ನೀಡಲಿಲ್ಲ ಎಂದು ಪ್ರಶ್ನಿಸಿದ ಜೋಶಿ, ಇದು ಕಾಂಗ್ರೆಸ್‌ನ ದ್ವಿಮುಖ ನೀತಿಯನ್ನು ಬಯಲಿಗೆಳೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.

ನೀಟ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಯಾವುದೇ ಹೊಣೆಗಾರಿಕೆಯಿಂದ ಹಿಂದೆ ಸರಿದಿಲ್ಲ. ವ್ಯವಸ್ಥೆಯನ್ನು ಸುಧಾರಿಸಲು ಆದ್ಯತೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷಾ ಮಾಫಿಯಾದ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಭಾರೀ ದಂಡ ವಿಧಿಸುವ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.

ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಡಳಿತಾವಧಿಯಲ್ಲಿ 19 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದವು. ಅಂದಿನ ಪರಿಸ್ಥಿತಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಒಪ್ಪಿಕೊಂಡಿದ್ದರು ಎಂದು ಜೋಶಿ ಹೇಳಿದರು.

2014ರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ವೈದ್ಯಕೀಯ ಕಾಲೇಜುಗಳಲ್ಲಿ ನಿರ್ವಹಣಾ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿ, ಅರ್ಹತೆಗೆ ಆದ್ಯತೆ ನೀಡಲಾಗಿದೆ. 2014ರಲ್ಲಿ ಸುಮಾರು 51 ಸಾವಿರ ಇದ್ದ ವೈದ್ಯಕೀಯ ಸೀಟುಗಳ ಸಂಖ್ಯೆ ಈಗ ಮೂರು ಪಟ್ಟು ಹೆಚ್ಚಿದ್ದು, ಏಮ್ಸ್ ಸಂಸ್ಥೆಗಳ ಸಂಖ್ಯೆಯನ್ನೂ ಗಣನೀಯವಾಗಿ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪತ್ತೆಯಾದ ತಕ್ಷಣ ಪರೀಕ್ಷೆಯನ್ನು ರದ್ದುಪಡಿಸಿ, ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸಲಾಗಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಹಾಗೂ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande