
ವಿಜಯಪುರ, 24 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದ
ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯನಿಷ್ಠೆ ಮತ್ತು ಸಮರ್ಪಿತ ತನಿಖೆಯ ಮೂಲಕ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉದ್ಯೋಗ ವಂಚನೆ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರ ಈ ಅತ್ಯುತ್ತಮ ಸೇವೆಯನ್ನು ಗುರುತಿಸಿ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಪ್ರಶಂಸಾ
ಪತ್ರ ನೀಡಿ ಗೌರವಿಸಿದ್ದಾರೆ.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಪ್ರಶಂಸನಾ ಪತ್ರ ಪ್ರದಾನ ಮಾಡಲಾಯಿತು.
ಬಂಧಿತ ಆರೋಪಿಯು ತನ್ನನ್ನು ತಾನು ಡಿಎಸ್ಪಿ ಎಂದು ಪರಿಚಯಿಸಿಕೊಂಡು, ನಿರುದ್ಯೋಗಿ ಯುವಕರಿಗೆ ಪೊಲೀಸ್ ಇಲಾಖೆ ಹಾಗೂ ಜೈಲರ್ ಹುದ್ದೆಗಳಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಎನ್ನಲಾಗಿದೆ. ಈ ಸಂಬಂಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು ನಾಲ್ಕು ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣ ದಾಖಲಾದ ಬಳಿಕ ಆರೋಪಿಯು ಸುಮಾರು 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ದೊಡ್ಡ ಸವಾಲಾಗಿದ್ದರೂ, ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರ ಮಾಹಿತಿ ಸಂಗ್ರಹ, ತಾಂತ್ರಿಕ ತನಿಖೆ ಮತ್ತು ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಅಂತಿಮವಾಗಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಯಶಸ್ವಿ ಕಾರ್ಯಾಚರಣೆಯು ಪೊಲೀಸ್ ಇಲಾಖೆಯ ತನಿಖಾ ಸಾಮರ್ಥ್ಯ ಮತ್ತು ಕರ್ತವ್ಯನಿಷ್ಠೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹಿರಿಯ ಅಧಿಕಾರಿಗಳು ಶ್ಲಾಘಿಸಿದರು.
ಸಮಾರಂಭದಲ್ಲಿ ಮಾತನಾಡಿದ ಅಧಿಕಾರಿಗಳು, ಯಾವುದೇ ಅಪರಾಧಿ ಎಷ್ಟೇ ವರ್ಷಗಳ ಕಾಲ ತಲೆಮರೆಸಿಕೊಂಡಿದ್ದರೂ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಈ ಕಾರ್ಯಾಚರಣೆ ನೀಡಿದೆ ಎಂದು ಹೇಳಿದರು. ಸಾರ್ವಜನಿಕರು ಉದ್ಯೋಗದ ಹೆಸರಿನಲ್ಲಿ ಹಣ ಕೇಳುವ ಮೋಸಗಾರರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಹಾಗೂ ಇಂತಹ ವಂಚನೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಠಾಣೆಗಳ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದು, ಉತ್ತಮ ಕರ್ತವ್ಯ ನಿರ್ವಹಿಸಿದ ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande