
ನವದೆಹಲಿ, 24 ಜುಲೈ (ಹಿ.ಸ.):
ಆ್ಯಂಕರ್:ಭಾರತವನ್ನು ಜಾಗತಿಕ ನವೀಕರಿಸಬಹುದಾದ ಇಂಧನ ಕ್ಷೇತ್ರದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನವೆಂಬರ್ 2ರಿಂದ 5ರವರೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ 'ಭಾರತ್ ನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಎಕ್ಸ್‌ಪೋ ಆಯೋಜಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಗುರುವಾರ ಶೃಂಗಸಭೆಯ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಆರ್ ಇಎಸ್ಇ-2026 ಇದೇ ಮೊದಲ ಬಾರಿಗೆ ಮೂರು ಪ್ರಮುಖ ಜಾಗತಿಕ ನವೀಕರಿಸಬಹುದಾದ ಇಂಧನ ಕಾರ್ಯಕ್ರಮಗಳನ್ನು ಒಂದೇ ವೇದಿಕೆಯಡಿ ಆಯೋಜಿಸುತ್ತಿರುವ ಐತಿಹಾಸಿಕ ಸಮಾವೇಶವಾಗಿದೆ ಎಂದು ಹೇಳಿದರು. ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು, ನೀತಿ ನಿರ್ಧಾರಕರು, ಕೈಗಾರಿಕಾ ವಲಯದ ನಾಯಕರು, ಹೂಡಿಕೆದಾರರು ಹಾಗೂ ತಜ್ಞರು ಭಾಗವಹಿಸಲಿದ್ದಾರೆ.
ಸಚಿವರ ಪ್ರಕಾರ, ಶೃಂಗಸಭೆಯೊಂದಿಗೆ ಅಂತಾರಾಷ್ಟ್ರೀಯ ಸೌರ ಒಕ್ಕೂಟದ 9ನೇ ಅಧಿವೇಶನ ಹಾಗೂ ಹಸಿರು ಹೈಡ್ರೋಜನ್ ಕುರಿತ 4ನೇ ಅಂತರಾಷ್ಟ್ರೀಯ ಸಮ್ಮೇಳನ ಸಹ ನಡೆಯಲಿದೆ. ಇದರಿಂದ ಸೌರಶಕ್ತಿ, ಹಸಿರು ಹೈಡ್ರೋಜನ್, ಶಕ್ತಿ ಸಂಗ್ರಹ ತಂತ್ರಜ್ಞಾನ, ಹೂಡಿಕೆ ಮತ್ತು ತಾಂತ್ರಿಕ ಸಹಕಾರಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆಯಲಿವೆ.
ಪ್ರಲ್ಹಾದ ಜೋಶಿ ಅವರು, ಈ ಶೃಂಗಸಭೆಗೆ 34 ಹೊಸ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು. ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಮೂಲಕ 128 ದೇಶಗಳು ಈ ಸಮಾವೇಶದಲ್ಲಿ ಭಾಗವಹಿಸುವ ಅವಕಾಶ ಹೊಂದಿದ್ದು, ಜಾಗತಿಕ ಮಟ್ಟದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ಪಾಲುದಾರಿಕೆ, ತಂತ್ರಜ್ಞಾನ ವಿನಿಮಯ ಮತ್ತು ಹೂಡಿಕೆ ಅವಕಾಶಗಳನ್ನು ಸೃಷ್ಟಿಸಲು ಇದು ನೆರವಾಗಲಿದೆ ಎಂದು ಹೇಳಿದರು.
ಭಾರತ ಶುದ್ಧ ಇಂಧನ ಕ್ಷೇತ್ರದಲ್ಲಿ ವೇಗವಾಗಿ ಮುನ್ನಡೆಯುತ್ತಿದ್ದು, ದೇಶವು ಶೀಘ್ರದಲ್ಲೇ 300 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಮೈಲಿಗಲ್ಲು ತಲುಪಲಿದೆ ಎಂದು ಸಚಿವರು ತಿಳಿಸಿದರು. ಜೊತೆಗೆ 'ಪ್ರಧಾನಮಂತ್ರಿ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ' ಅಡಿಯಲ್ಲಿ ಶೀಘ್ರದಲ್ಲೇ 50 ಲಕ್ಷ ಫಲಾನುಭವಿಗಳ ಗುರಿ ಸಾಧಿಸುವ ನಿರೀಕ್ಷೆಯಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರು 'ಊರ್ಜಾ ಚಕ್ರ' ಎಂಬ ಅಧಿಕೃತ ಲಾಂಛನವನ್ನು ಅನಾವರಣಗೊಳಿಸುವ ಜೊತೆಗೆ, ಶೃಂಗಸಭೆಯ ಡಿಜಿಟಲ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊ ನಾಯಕ್ ಮಾತನಾಡಿ, ದೇಶದ ಎಲ್ಲಾ ರಾಜ್ಯಗಳ ಸಹಭಾಗಿತ್ವದಿಂದಲೇ ಭಾರತದ ನವೀಕರಿಸಬಹುದಾದ ಇಂಧನ ಪರಿವರ್ತನೆ ಯಶಸ್ವಿಯಾಗುತ್ತಿದೆ ಎಂದು ಹೇಳಿದರು.
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ, ಮುಂದಿನ ಹಂತದಲ್ಲಿ ಹೈಬ್ರಿಡ್ ನವೀಕರಿಸಬಹುದಾದ ಇಂಧನ ಯೋಜನೆಗಳು, ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆಗಳು, ತೇಲುವ ಸೌರಶಕ್ತಿ ಯೋಜನೆಗಳು, ಕೃಷಿ ವೋಲ್ಟಾಯಿಕ್ ವ್ಯವಸ್ಥೆಗಳು ಹಾಗೂ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಮೂಲಕ ದೇಶದ ಶುದ್ಧ ಇಂಧನ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಹೇಳಿದರು.
ಬಿಆರ್ ಇಎಸ್ಇ-2026 ಸರ್ಕಾರಗಳು, ಕೈಗಾರಿಕೆಗಳು, ಹೂಡಿಕೆದಾರರು, ಸಂಶೋಧಕರು ಮತ್ತು ಅಂತಾರಾಷ್ಟ್ರೀಯ ಪಾಲುದಾರರನ್ನು ಒಂದೇ ವೇದಿಕೆಗೆ ತಂದು, ಶುದ್ಧ ಇಂಧನ ಕ್ಷೇತ್ರದಲ್ಲಿ ಹೂಡಿಕೆ, ತಂತ್ರಜ್ಞಾನ ಅಭಿವೃದ್ಧಿ ಮತ್ತು ಜಾಗತಿಕ ಸಹಯೋಗವನ್ನು ಮತ್ತಷ್ಟು ವೇಗಗೊಳಿಸುವ ಮಹತ್ವದ ವೇದಿಕೆಯಾಗಲಿದೆ ಎಂದು ಸಚಿವಾಲಯ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.