ಅಪ್ರಾಪ್ತರಿಗೆ ನಿವೇಶನ ಹಂಚಿಕೆ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ತರಾಟೆ
ಬಾಗಲಕೋಟೆ, 24 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿನ ಗಂಭೀರ ಅಕ್ರಮಗಳು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಗಮನಕ್ಕೆ ಬಂದಿದ್ದು, ಪರಿಶೀಲನೆ ವೇಳೆ ಅಪ್ರಾಪ್ತ ವಯಸ್ಸಿನವರ ಹೆಸರಿನಲ್ಲಿಯೂ ನಿವೇಶನಗಳನ್ನು ಮಂಜೂ
ಆಚಾರಿ


ಬಾಗಲಕೋಟೆ, 24 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿನ ಗಂಭೀರ ಅಕ್ರಮಗಳು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಗಮನಕ್ಕೆ ಬಂದಿದ್ದು, ಪರಿಶೀಲನೆ ವೇಳೆ ಅಪ್ರಾಪ್ತ ವಯಸ್ಸಿನವರ ಹೆಸರಿನಲ್ಲಿಯೂ ನಿವೇಶನಗಳನ್ನು ಮಂಜೂರು ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.

ಈ ಮಾಹಿತಿ ಕೇಳಿದ ಉಪಲೋಕಾಯುಕ್ತರು ತೀವ್ರ ಅಚ್ಚರಿ ವ್ಯಕ್ತಪಡಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪರಿಶೀಲನೆಯ ವೇಳೆ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರು, ಅರ್ಹತಾ ಮಾನದಂಡಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಪ್ರಾಪ್ತರಿಗೆ ಕಾನೂನುಬದ್ಧವಾಗಿ ನಿವೇಶನ ಹಂಚಿಕೆ ಹೇಗೆ ಸಾಧ್ಯವಾಯಿತು? ಇದಕ್ಕೆ ಯಾರು ಹೊಣೆ? ಯಾವ ಆಧಾರದ ಮೇಲೆ ಅನುಮೋದನೆ ನೀಡಲಾಯಿತು? ಎಂಬ ಪ್ರಶ್ನೆಗಳನ್ನು ಅಧಿಕಾರಿಗಳ ಮುಂದಿಟ್ಟರು.

ಇಂತಹ ಗಂಭೀರ ಲೋಪಗಳು ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುವಂತವು ಎಂದು ಅವರು ಅಭಿಪ್ರಾಯಪಟ್ಟರು. ಅರ್ಜಿ ಪರಿಶೀಲನೆ, ದಾಖಲೆಗಳ ದೃಢೀಕರಣ ಹಾಗೂ ಅರ್ಹತಾ ಮಾನದಂಡಗಳ ಅನುಸರಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದರೆ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅಕ್ರಮ ನಡೆದಿರುವುದು ದೃಢಪಟ್ಟರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಹಾಗೂ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದರು. ಸಾರ್ವಜನಿಕರ ಹಕ್ಕುಗಳಿಗೆ ಧಕ್ಕೆ ತರುವ ಯಾವುದೇ ರೀತಿಯ ಅಕ್ರಮವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande