
ಬಾಗಲಕೋಟೆ, 24 ಜುಲೈ (ಹಿ.ಸ.)
ಆ್ಯಂಕರ್ : ನೀಟ್ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ತಪ್ಪಿತಸ್ಥರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡು ಕಾನೂನು ಪ್ರಕಾರ ಶಿಕ್ಷೆ ನೀಡಲು ಸಂಪೂರ್ಣ ಬದ್ಧವಾಗಿದೆ. ಆದರೆ, ಈ ವಿಷಯವನ್ನು ನೆಪವನ್ನಾಗಿ ಮಾಡಿಕೊಂಡು ದೇಶದಲ್ಲಿ ಗೂಂಡಾಗಿರಿ, ಹಿಂಸಾಚಾರ ಅಥವಾ ಅಶಾಂತಿ ಸೃಷ್ಟಿಸಲು ಯತ್ನಿಸಿದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ತೀವ್ರ ವಾಗ್ದಾಳಿ ನಡೆಸಿದರು.
ಬಾಗಲಕೋಟೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ಭವಿಷ್ಯ ರೂಪಿಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ವ್ಯವಸ್ಥೆ ಅತ್ಯಂತ ಮುಖ್ಯವಾಗಿದೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗಬೇಕು ಎಂಬುದು ಕೇಂದ್ರ ಸರ್ಕಾರದ ಸ್ಪಷ್ಟ ನಿಲುವಾಗಿದೆ ಎಂದು ಹೇಳಿದರು.
ವಿರೋಧ ಪಕ್ಷಗಳು ಈ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ. ವಿದ್ಯಾರ್ಥಿಗಳ ಭಾವನೆಗಳನ್ನು ಕೆರಳಿಸಿ ಪ್ರತಿಭಟನೆಯ ಹೆಸರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದ್ದರೂ ಅದು ಶಾಂತಿಯುತವಾಗಿರಬೇಕು. ಸಾರ್ವಜನಿಕ ಆಸ್ತಿ ಹಾನಿ, ಗೂಂಡಾಗಿರಿ ಹಾಗೂ ಹಿಂಸಾತ್ಮಕ ಚಟುವಟಿಕೆಗಳಿಗೆ ಯಾವುದೇ ರೀತಿಯ ಸಮರ್ಥನೆ ಇಲ್ಲ ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತಿದೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ದೇಶದ ಯುವಜನತೆಗೆ ನ್ಯಾಯ ಒದಗಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಅಕ್ರಮ ಎಸಗಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಲಿದೆ. ಆದರೆ ಕಾನೂನು ಕೈಗೆತ್ತಿಕೊಂಡು ಅಶಾಂತಿ ಸೃಷ್ಟಿಸಲು ಯತ್ನಿಸಿದರೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ವೀರಣ್ಣ ಚರಂತಿಮಠ ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ತನಿಖೆಯ ಫಲಿತಾಂಶಕ್ಕಾಗಿ ಕಾಯಬೇಕು. ದೇಶದ ಕಾನೂನು ವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande