
ಬಾಗಲಕೋಟೆ, 24 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಕ್ರಾಸ್ನಲ್ಲಿ ವಿಜಯಪುರ–ಧಾರವಾಡ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲೇ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ರೈತರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವಿನೂತನವಾಗಿ ವ್ಯಕ್ತಪಡಿಸಿದರು.
13 ವರ್ಷಗಳಿಂದ ಪೂರ್ಣಗೊಳ್ಳದೆ ನೆನೆಗುದಿಗೆ ಬಿದ್ದಿರುವ ಚಿಕ್ಕಲಕಿ–ತೊದಲಬಾಗಿ–ಏಕಲಮಟ್ಟಿ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿತು.
ಹೋರಾಟದ ಭಾಗವಾಗಿ ನೂರಾರು ರೈತರು ತಮ್ಮ ಎತ್ತು ಚಕ್ಕಡಿಗಳೊಂದಿಗೆ ಚಿಕ್ಕಲಕಿ ಕ್ರಾಸ್ಗೆ ಆಗಮಿಸಿ, ಹೆದ್ದಾರಿಯ ಮಧ್ಯದಲ್ಲೇ ಅವುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಹಿಳೆಯರು ಹಾಗೂ ರೈತರು ಒಟ್ಟಾಗಿ ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು.
ಪ್ರತಿಭಟನೆಯಿಂದ ಚಿಕ್ಕಲಕಿ ಕ್ರಾಸ್ನಲ್ಲಿ ಕೆಲಕಾಲ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಯಿತು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸುವ ಪ್ರಯತ್ನ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ರೈತರ ಮಾತಿನ ಪ್ರಕಾರ, ಏಕಲಮಟ್ಟಿ ಏತ ನೀರಾವರಿ ಯೋಜನೆ ಆರಂಭವಾಗಿ 13 ವರ್ಷಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಸಾವಿರಾರು ಎಕರೆ ಕೃಷಿಭೂಮಿಗೆ ನೀರು ದೊರೆಯದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದ ಕಾರಣ ಹೋರಾಟದ ಹಾದಿ ಹಿಡಿಯಬೇಕಾಯಿತು ಎಂದು ರೈತರು ಆರೋಪಿಸಿದರು.
ಯೋಜನೆ ಪೂರ್ಣಗೊಂಡರೆ ಈ ಭಾಗದ ಕೃಷಿಗೆ ಹೊಸ ಜೀವ ಸಿಗಲಿದೆ. ಆದರೆ ನಿರಂತರ ವಿಳಂಬದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಕಾಮಗಾರಿಗೆ ವೇಗ ನೀಡಿ ಯೋಜನೆಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಇನ್ನಷ್ಟು ಉಗ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ರೈತ ಸಂಘದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಗೆ ವಿವಿಧ ಗ್ರಾಮಗಳ ರೈತರು, ಮಹಿಳೆಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸರ್ಕಾರ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಂಡು ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಬೇಕೆಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande