
ವಿಜಯಪುರ, 25 ಜುಲೈ (ಹಿ.ಸ.)
ಆ್ಯಂಕರ್ : ದೇಶಾದ್ಯಂತ ನಡೆಯುತ್ತಿರುವ ನೀಟ್ ಪರೀಕ್ಷೆ ಸಂಬಂಧಿತ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ, ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ ಹಾಗೂ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಯುವಜನರು ಹಾಗೂ ಮಹಿಳೆಯರು ಶನಿವಾರ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಶಿಕ್ಷಣ ನೀತಿ, ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆ ಹಾಗೂ ನೀಟ್ ಪರೀಕ್ಷೆಯಲ್ಲಿ ಉಂಟಾಗಿರುವ ಎನ್ನಲಾದ ಅಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳುವಂತಹ ಯಾವುದೇ ಕ್ರಮವನ್ನು ಸರ್ಕಾರ ಕೈಬಿಡಬೇಕು ಹಾಗೂ ಉನ್ನತ ಶಿಕ್ಷಣ ಪ್ರವೇಶ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸಿದರು.
ಸಂಘಟನೆಗಳ ಮುಖಂಡರು ಮಾತನಾಡಿ, ದೇಶದಾದ್ಯಂತ ವಿದ್ಯಾರ್ಥಿಗಳು ನ್ಯಾಯಸಮ್ಮತ ಶಿಕ್ಷಣ ವ್ಯವಸ್ಥೆಗಾಗಿ ಹೋರಾಟ ನಡೆಸುತ್ತಿದ್ದು, ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು. ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ವಿಶ್ವಾಸ ಮೂಡಿಸುವ ಕ್ರಮಗಳನ್ನು ಸರ್ಕಾರ ತಕ್ಷಣ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ನೀಟ್ ಪರೀಕ್ಷೆಯಲ್ಲಿನ ಎನ್ನಲಾದ ಅಕ್ರಮಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವುದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು, ವಿದ್ಯಾರ್ಥಿಗಳ ಹಿತಾಸಕ್ತಿಗೆ ಧಕ್ಕೆ ಆಗದಂತೆ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರುವುದು ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande