
ವಿಜಯಪುರ, 25 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ವಸತಿ ವ್ಯವಸ್ಥೆ, ಆಹಾರದ ಗುಣಮಟ್ಟ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದರು.
ಭೇಟಿಯ ವೇಳೆ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಅವರ ವಿದ್ಯಾಭ್ಯಾಸ, ಆರೋಗ್ಯ, ದಿನನಿತ್ಯದ ಚಟುವಟಿಕೆಗಳು ಹಾಗೂ ವಸತಿ ಶಾಲೆಯಲ್ಲಿನ ಅನುಭವಗಳ ಕುರಿತು ಮಾಹಿತಿ ಪಡೆದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿ ಆಹಾರದ ಗುಣಮಟ್ಟವನ್ನು ಸ್ವತಃ ಪರಿಶೀಲಿಸಿ, ಮಕ್ಕಳಿಗೆ ಪೌಷ್ಟಿಕ ಮತ್ತು ಗುಣಮಟ್ಟದ ಆಹಾರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು
ನಂತರ ಮಾತನಾಡಿದ ಅವರು, ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡುವುದು ಮಾತ್ರವಲ್ಲದೆ ಉತ್ತಮ ವಾತಾವರಣ, ಆರೋಗ್ಯಕರ ಆಹಾರ ಹಾಗೂ ಸುರಕ್ಷಿತ ವಸತಿ ವ್ಯವಸ್ಥೆಯನ್ನು ಕಲ್ಪಿಸುವುದು ಆಡಳಿತದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ನಿಗದಿತ ಮೆನ್ಯೂ ಪ್ರಕಾರ ಉಪಹಾರ ಹಾಗೂ ಊಟವನ್ನು ನಿಯಮಿತವಾಗಿ ನೀಡಬೇಕು. ಆಹಾರದ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಈ ಜವಾಬ್ದಾರಿಯನ್ನು ನಿಲಯ ಪಾಲಕರು, ಪ್ರಾಚಾರ್ಯರು ಹಾಗೂ ಶಿಕ್ಷಕರು ಅತ್ಯಂತ ಕಾಳಜಿಯಿಂದ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಶಾಲೆಯ ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಗ್ರಂಥಾಲಯ ಬಳಕೆ, ಗುಂಪು ಅಧ್ಯಯನ, ವಿವಿಧ ಬೋಧನಾ ಉಪಕ್ರಮಗಳು ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಜಾರಿಗೆ ತರಬೇಕು.
ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆಗಳು ಅಥವಾ ವೈಯಕ್ತಿಕ ತೊಂದರೆಗಳನ್ನು ಸಮಯಕ್ಕೆ ಸರಿಯಾಗಿ ಆಲಿಸಿ ಪರಿಹರಿಸಬೇಕು. ಶಿಕ್ಷಕರು ಮಕ್ಕಳ ಸ್ನೇಹಿತರಾಗಿ ಅವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಆಸಕ್ತಿ ಮತ್ತು ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದು ಶಿಕ್ಷಕರ ಪ್ರಮುಖ ಕೌಶಲ್ಯವಾಗಬೇಕು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳು ಶಾಲೆಯ ಸ್ನಾನಗೃಹ, ಶೌಚಾಲಯ ಹಾಗೂ ಇತರ ಮೂಲಭೂತ ಸೌಲಭ್ಯಗಳ ಲಭ್ಯತೆ ಕುರಿತು ಮಾಹಿತಿ ಪಡೆದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ನಿರ್ವಹಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವಸತಿ ಶಾಲೆಯಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಅಂಕಗಳೊಂದಿಗೆ ಸಾಧನೆ ಮಾಡುವ ಮೂಲಕ ತಮ್ಮ ಶಾಲೆ, ಶಿಕ್ಷಕರು ಹಾಗೂ ಪೋಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ಕಿವಿಮಾತು ಹೇಳಿದರು.
ಬಳಿಕ ಅಡುಗೆ ಸಿಬ್ಬಂದಿಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಆಹಾರ ತಯಾರಿಸುವ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವ ಹಾಗೂ ಅಡುಗೆಮನೆಯ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಗುಣಮಟ್ಟದ ಆಹಾರವೇ ಮಕ್ಕಳ ಆರೋಗ್ಯ ಮತ್ತು ಕಲಿಕೆಗೆ ಆಧಾರವಾಗಿರುವುದರಿಂದ ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯರು, ನಿಲಯ ಪಾಲಕರು, ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande