
ಚಿತ್ರದುರ್ಗ, 25 ಜುಲೈ (ಹಿ.ಸ.):
ಆ್ಯಂಕರ್:
ಕೆಪಿಎಸ್‌ಸಿ ಅಧ್ಯಕ್ಷರನ್ನು ನೇಮಿಸಿದ್ದು ಬಿಜೆಪಿ ಸರ್ಕಾರವೇ ಹೊರತು ಕಾಂಗ್ರೆಸ್ ಅಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಎಸ್‌ಸಿ ಅಧ್ಯಕ್ಷರ ನೇಮಕವನ್ನು ಬಿಜೆಪಿ ಸರ್ಕಾರವೇ ಮಾಡಿದ್ದು, ಈಗ ಅದೇ ವಿಚಾರದಲ್ಲಿ ಬಿಜೆಪಿ ಸಿಲುಕಿಕೊಂಡಿದೆ ಎಂದು ಟೀಕಿಸಿದ ಮುಖ್ಯಮಂತ್ರಿ, ರಾಜ್ಯಪಾಲರು ಕಳುಹಿಸಿರುವ ಶಿಫಾರಸನ್ನು ನಾವು ಅಂಗೀಕರಿಸಿದ್ದೇವೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾಂಗ್ರೆಸ್ ಕಚೇರಿಗಳ ಮುಂದೆ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಎದುರಾಗಿರುವ ಅವಮಾನವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ನಾವು ಸಂಸತ್ತಿನಲ್ಲಿ ನೀಟ್ ವಿಷಯದ ಕುರಿತು ಚರ್ಚೆ ನಡೆಸಬೇಕು, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಬೇಕು ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೇವೆ. ಮಕ್ಕಳ ಮೇಲೆ ಲಾಠಿ ಪ್ರಹಾರ ನಡೆದಿರುವುದಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಅದನ್ನು ತಡೆದುಕೊಳ್ಳಲಾಗದೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಆರೋಪಿಸಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು ಎಂದು ಹೇಳಿದ ಅವರು, ನನ್ನ ವಿರುದ್ಧವೂ ಪ್ರತಿಭಟನೆ ನಡೆದರೆ ಅದನ್ನು ತಡೆಯಲು ಸಾಧ್ಯವಿಲ್ಲ. ಮಾಧ್ಯಮಗಳೂ ಸಹ ಪ್ರತಿಭಟನೆ ನಡೆಸಬಹುದು. ಅದನ್ನು ವಿರೋಧಿಸಲು ಸಾಧ್ಯವಿಲ್ಲ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.