
ಬಾಗಲಕೋಟೆ, 25 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಾಗರಾಜ್ ಹದ್ಲಿ ಅವರು ಇಂದು ಎಐಸಿಸಿ ವೀಕ್ಷಕರಾದ ಬಾಲಯ್ಯ ನಾಯಕ ಅವರಿಗೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದು, ಈ ಬೆಳವಣಿಗೆ ಜಿಲ್ಲಾ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಹಲವು ನಾಯಕರು ಆಸಕ್ತಿ ವ್ಯಕ್ತಪಡಿಸಿರುವ ಸಂದರ್ಭದಲ್ಲಿ ನಾಗರಾಜ್ ಹದ್ಲಿ ಅವರ ಅರ್ಜಿಯು ವಿಶೇಷ ಗಮನ ಸೆಳೆದಿದೆ. ಕಾರಣ, ಈ ಹಿಂದೆ ಅವರು ಬೆಳಗಾವಿಯಲ್ಲಿ ನಡೆದಿದ್ದ ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ, ನಾಗರಾಜ್ ಹದ್ಲಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂಬ ಆಗ್ರಹವೂ ಆಗ ಕೇಳಿಬಂದಿತ್ತು. ಈ ವಿಚಾರ ರಾಜ್ಯ ಮಟ್ಟದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಅದೇ ನಾಗರಾಜ್ ಹದ್ಲಿ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಪಕ್ಷದೊಳಗೆ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಪಕ್ಷದ ಶಿಸ್ತು, ಸಿದ್ಧಾಂತ ಹಾಗೂ ಸಂಘಟನೆಗೆ ಬದ್ಧತೆ ಕುರಿತು ಮತ್ತೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ.
ಎಐಸಿಸಿ ವೀಕ್ಷಕರಾದ ಬಾಲಯ್ಯ ನಾಯಕ ಅವರು ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಿಧ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಯಾರಿಗೆ ಅವಕಾಶ ನೀಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ನಾಗರಾಜ್ ಹದ್ಲಿ ಅವರ ಅರ್ಜಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಯಾವ ನಿಲುವು ತಾಳಲಿದೆ? ಹಿಂದಿನ ವಿವಾದವನ್ನು ಪರಿಗಣಿಸಲಾಗುತ್ತದೆಯೇ ಅಥವಾ ಸಂಘಟನಾ ಸಾಮರ್ಥ್ಯಕ್ಕೆ ಆದ್ಯತೆ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗಳು ಈಗ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ.
ಒಟ್ಟಾರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಗರಾಜ್ ಹದ್ಲಿ ಅವರ ಅರ್ಜಿ ಸಲ್ಲಿಕೆಯು ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನದತ್ತ ಎಲ್ಲರ ಚಿತ್ತ ನೆಟ್ಟಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande