ರೈತರ ಅನುಕೂಲಕ್ಕೆ ಭರದಿಂದ ಸಾಗುತ್ತಿರುವ ರಸ್ತೆ ಕಾಮಗಾರಿ
ಬಾಗಲಕೋಟೆ, 25 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರಂಜಣಗಿ–ಮಿರ್ಜಿ ಒಳರಸ್ತೆಯ ಮರುಡಾಂಬರೀಕರಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ರೈತರು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರದ ವ್ಯವಸ್ಥೆ ದೊರೆಯುವ ನಿರೀಕ್ಷೆ ವ
ರೋಡ್


ಬಾಗಲಕೋಟೆ, 25 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರಂಜಣಗಿ–ಮಿರ್ಜಿ ಒಳರಸ್ತೆಯ ಮರುಡಾಂಬರೀಕರಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ರೈತರು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರದ ವ್ಯವಸ್ಥೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

ತೋಟಪಟ್ಟಿಗಳ ನಡುವೆ ಹಾದು ಹೋಗುವ ಈ ಪ್ರಮುಖ ಗ್ರಾಮೀಣ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿತ್ತು. ರಸ್ತೆ ಗುಂಡಿಗಳಿಂದ ಕೂಡಿದ್ದ ಕಾರಣ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಪರದಾಡಬೇಕಾಗುತ್ತಿತ್ತು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಗ್ರಾಮಸ್ಥರು ಸಹ ಪ್ರತಿನಿತ್ಯ ಸಂಕಷ್ಟ ಅನುಭವಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ರಸ್ತೆ ಮರುಡಾಂಬರೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಯಂತ್ರೋಪಕರಣಗಳ ಸಹಾಯದಿಂದ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ರಸ್ತೆ ನಿರ್ಮಾಣ ಪೂರ್ಣಗೊಂಡ ಬಳಿಕ ಸಂಚಾರ ಸುಗಮವಾಗುವುದರ ಜೊತೆಗೆ ಅಪಘಾತಗಳ ಪ್ರಮಾಣವೂ ಕಡಿಮೆಯಾಗುವ ನಿರೀಕ್ಷೆಯಿದೆ.

ಉತ್ತೂರ, ರಂಜಣಗಿ, ಒಂಟಗೋಡಿ ಹಾಗೂ ಮಿರ್ಜಿ ಗ್ರಾಮಗಳನ್ನು ಸಂಪರ್ಕಿಸುವ ಈ ಒಳರಸ್ತೆ ಗ್ರಾಮೀಣ ಭಾಗದ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಕೃಷಿ ಚಟುವಟಿಕೆಗಳಿಗೆ ಈ ರಸ್ತೆ ಜೀವನಾಡಿಯಂತಿದ್ದು, ರೈತರು ತಮ್ಮ ಹೊಲಗಳಿಗೆ ತೆರಳಲು ಹಾಗೂ ಬೆಳೆಗಳನ್ನು ಸಾಗಿಸಲು ಇದೇ ಮಾರ್ಗವನ್ನು ಹೆಚ್ಚಾಗಿ ಬಳಸುತ್ತಾರೆ.

ಮಳೆಗಾಲದಲ್ಲಿ ನದಿ ಉಕ್ಕಿ ಹರಿದಾಗ ಕೆಲವೆಡೆ ರಸ್ತೆ ಜಲಾವೃತವಾಗುವ ಸಮಸ್ಯೆ ಇದ್ದರೂ, ಉಳಿದ ಅವಧಿಯಲ್ಲಿ ವರ್ಷಪೂರ್ತಿ ಸಾವಿರಾರು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ. ಹೀಗಾಗಿ ಈ ರಸ್ತೆಯ ಅಭಿವೃದ್ಧಿಗೆ ಸ್ಥಳೀಯರು ಬಹುಕಾಲದಿಂದ ಆಗ್ರಹಿಸುತ್ತಿದ್ದರು.

ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ಪೂರ್ಣಗೊಂಡರೆ ಗ್ರಾಮೀಣ ಸಂಪರ್ಕ ವ್ಯವಸ್ಥೆ ಮತ್ತಷ್ಟು ಬಲವಾಗಲಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂದು ಅವರು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande