
ವಿಜಯಪುರ, 26 ಜುಲೈ (ಹಿ.ಸ.)
ಆ್ಯಂಕರ್ : ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಜಯಪುರ ನಗರದ ವಾರ್ಡ್ ನಂ. 14ರಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರ ನೇತೃತ್ವದಲ್ಲಿ ಭಾನುವಾರ ಮಹಾಸಂಪರ್ಕ ಅಭಿಯಾನ ನಡೆಸಲಾಯಿತು.
ಅಭಿಯಾನದ ಅಂಗವಾಗಿ ವಾರ್ಡ್ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಮನೆ-ಮನೆಗೆ ಭೇಟಿ ನೀಡಿದ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹಾಗೂ ಬಿಜೆಪಿ ಕಾರ್ಯಕರ್ತರು ಮತದಾರರನ್ನು ಭೇಟಿ ಮಾಡಿ ಎಸ್ಐಆರ್ ಪ್ರಕ್ರಿಯೆಯ ಮಹತ್ವ, ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡುವ ವಿಧಾನ ಹಾಗೂ ಅದನ್ನು ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಸಲ್ಲಿಸುವ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡುವ ವಿಷಯದಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಮತದಾರರಿಗೆ ಮನವಿ ಮಾಡಿದರು. ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಿ ಅವರಲ್ಲಿರುವ ಅನುಮಾನಗಳನ್ನು ನಿವಾರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಮಹಾಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಸುಮಾರು 56 ಸಾವಿರ ಬಿಎಲ್ಎ-2ಗಳನ್ನು ನೇಮಕ ಮಾಡಲಾಗಿದ್ದು, ಅವರ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. ಮತದಾರರಿಗೆ ಅಗತ್ಯ ಮಾರ್ಗದರ್ಶನ ನೀಡಲು ಬಿಎಲ್ಎಗಳು ಸದಾ ಸಿದ್ಧರಾಗಿದ್ದು, ಯಾವುದೇ ಸಂದೇಹಗಳಿದ್ದಲ್ಲಿ ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದರು.
ಎಸ್ಐಆರ್ ಪ್ರಕ್ರಿಯೆ ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಷ್ಕರಿಸುವ ಮಹತ್ವದ ಕಾರ್ಯವಾಗಿದೆ. ಆದರೆ ಕೆಲವು ವ್ಯಕ್ತಿಗಳು ಈ ಪ್ರಕ್ರಿಯೆಯ ಬಗ್ಗೆ ತಪ್ಪು ಮಾಹಿತಿ ಹರಡಿ ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನೇ ನಂಬುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದರು.
ಅಭಿಯಾನದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ, ಡಾ. ಸುರೇಶ ಬಿರಾದಾರ, ಚಿನ್ನು ಚಿನಗುಂಡಿ, ಮಹಾನಗರ ಪಾಲಿಕೆ ಸದಸ್ಯ ಜವಾಹರ ಗೋಸಾವಿ, ಭೀಮಾಶಂಕರ ಹದನೂರ, ಸಿದ್ದು ಮಲ್ಲಿಕಾರ್ಜುನಮಠ, ವಿಜಯ ಜೋಶಿ, ಪ್ರಕಾಶ ಮಿರ್ಜಿ, ವಿಕಾಸ ಪದಕಿ, ವಿವೇಕ ತಾವರಗೇರಿ, ಪ್ರಫುಲ್ ಪವಾರ, ಕೃಷ್ಣ ಮಾಯಾಚಾರಿ, ಸಂತೋಷ ಪತ್ತಾರ, ಅನಿಲ ಉಪ್ಪಾರ, ಸದಾಶಿವ ಚಲವಾದಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಹಾಗೂ ಪಾಲಿಕೆ ಸದಸ್ಯೆ ಸ್ವಪ್ನಾ ಕಣಮುಚನಾಳ, ಭಾರತಿ ಭೂಯಾರ್, ಜಯಶ್ರೀ ಅಫಜಲಪುರ, ಸಂತೋಷ ಹಲವಾಯಿ ಸೇರಿದಂತೆ ಹಲವರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande